
ರಾಜ್ಯದ ಪ್ರತಿ ಜಿಲ್ಲೆಯಲ್ಲಿ 50 ಸಾವಿರ ನಿವೇಶನ ಹಂಚಿಕೆ : ಡಿಸಿಎಂ ಪರಮೇಶ್ವರ್
ಬೆಂಗಳೂರು: ರಾಜ್ಯದ ಎಲ್ಲಾ ವಸತಿ ರಹಿತರಿಗೆ ನಿವೇಶನ ಒದಗಿಸುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದ್ದು, ರಾಜ್ಯದ ಪ್ರತಿ ಜಿಲ್ಲೆಯಲ್ಲಿ ತಲಾ 50 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲು ಸರ್ಕಾರ ಉದ್ದೇಶಿಸಿದೆ ಎಂದು ಡಿಸಿಎಂ ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಗ್ರಾಮೀಣ ಪ್ರದೇಶಗಳಲ್ಲಿ 30×40 ಅಡಿ ಹಾಗೂ ನಗರ ಪ್ರದೇಶಗಳಲ್ಲಿ 20×30 ಅಡಿ ಅಳತೆಯ ನಿವೇಶನಗಳನ್ನು ಸಿದ್ಧಪಡಿಸಿ ಅರ್ಹ ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.
ಈ ನಿಟ್ಟಿನಲ್ಲಿ ಲಭ್ಯವಿರುವ ಹಾಗೂ ಖಾಲಿ ಇರುವ ಸರ್ಕಾರಿ ಜಮೀನುಗಳನ್ನು ತಕ್ಷಣ ಗುರುತಿಸಿ, ನಿವೇಶನಗಳ ರಚನೆಗೆ ಅಗತ್ಯವಿರುವ ಎಲ್ಲ ಪ್ರಕ್ರಿಯೆಗಳನ್ನು ಯಾವುದೇ ವಿಳಂಬವಿಲ್ಲದೆ ತುರ್ತಾಗಿ ಕೈಗೊಳ್ಳುವಂತೆ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಪರಮೇಶ್ವರ್ ತಿಳಿಸಿದ್ದಾರೆ.
ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಕೊಟ್ಟ ಮಾತಿಗೆ ಬದ್ಧರಾಗಿ, ಪ್ರಣಾಳಿಕೆಯ ಘೋಷಣೆಗಳನ್ನು ಕಾರ್ಯರೂಪಕ್ಕೆ ತಂದು ನುಡಿದಂತೆ ನಡೆಯುತ್ತಿದ್ದೇವೆ ಎಂದು ಡಿಸಿಎಂ ಹೇಳಿದ್ದಾರೆ.
ಸರ್ವರಿಗೂ ಸ್ವಂತ ಸೂರಿನ ಭಾಗ್ಯ ಕಲ್ಪಿಸಿ, ಪ್ರತಿಯೊಬ್ಬರೂ ನೆಮ್ಮದಿಯಿಂದ ಜೀವನ ಸಾಗಿಸುವಂತಾಗಬೇಕು ಎಂಬುದೇ ಸರ್ಕಾರದ ಆಶಯ ಎಂದು ಅವರು ತಿಳಿಸಿದ್ದಾರೆ.
