Blogರಾಜ್ಯ-Karnataka

ಸುಪ್ರೀಂ ತೀರ್ಪಿನಂತೆ ಪರಿಶಿಷ್ಟ ಜಾತಿಯ ಒಳಮೀಸಲಾತಿ ಅನುಷ್ಠಾನಕ್ಕೆ ಆಗ್ರಹಿಸಿ ಸೆ.09 ರಂದು ದಸಂಸ ಪ್ರತಿಭಟನೆ

ಬೆಂಗಳೂರು : ಸುಪ್ರೀಂ ಕೋರ್ಟ್ ತೀರ್ಪಿನಂತೆ ರಾಜ್ಯ ಸರ್ಕಾರ ಪರಿಶಿಷ್ಟರ ಮೀಸಲಾತಿಯಲ್ಲಿ ಒಳಮೀಸಲಾತಿ ಅನುಷ್ಠಾನಗೊಳಿಸಲು,ಸೆ.09 ರಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಮುಂದೆ ಬೃಹತ್ ಪ್ರತಿಭಟನೆ ನಡೆಸಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ದಸಂಸ ರಾಜ್ಯಾಧ್ಯಕ್ಷ ಡಾ.ಎನ್ ಮೂರ್ತಿ ತಿಳಿಸಿದರು

ಪತ್ರಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಇವರು, ಪರಿಶಿಷ್ಟರ ಮೀಸಲಾತಿ ಪರಿಶಿಷ್ಟ ಜನಾಂಗದ 101 ಜಾತಿಗಳಲ್ಲಿ ಸಮನಾಗಿ ಹಂಚಿಕೆಯಾಗಿಲ್ಲ ಎಂಬ ಆತಂಕ ಹಾಗೂ ಅಸಹನೆಯಿಂದ 30 ದಶಕಗಳಿಂದ ರಾಜ್ಯಾದ್ಯಾಂತ ನಿರಂತರವಾಗಿ ಹೋರಾಟಗಳು ನಡೆಯುತ್ತಿದೆ. ಹೋರಾಟದಲ್ಲಿ ಹಲವಾರು ಹೋರಾಟಗಾರರು ಜೀವ, ಜೀವನ ಹಾಗೂ ಬದುಕನ್ನೇ ಕಳೆದುಕೊಂಡಿದ್ದಾರೆ.

ಪರಿಶಿಷ್ಟ ಜಾತಿ, ಪಂಗಡಗಳಿಗೆ ಮೀಸಲಾಗಿರುವ ಹಣವನ್ನು ರಸ್ತೆ ಮುಂತಾದ ಕಾಮಗಾರಿಗಳಿಗೆ ಬಳಸಿಕೊಂಡು ಸರ್ಕಾರ ಅನ್ಯಾಯ ಮಾಡುತ್ತಿದೆ. ನಮ್ಮ ಸಮುದಾಯಕ್ಕೆ ಇದ್ದ ಅನೇಕ ವಿದ್ಯಾರ್ಥಿ ಸೌಲತ್ತುಗಳನ್ನು ಕಿತ್ತುಕೊಂಡಿದೆ. ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ. ಕೂಡಲೇ ರಾಹುಲ್ ಗಾಂಧಿ ಪ್ರವೇಶ ಮಾಡಿ ಸಮಸ್ಯೆಗಳನ್ನು ಬಗೆಹರಿಸಬೇಕು. ಇದರ ಕುರಿತಾಗಿ ಮಲ್ಲಿಕಾರ್ಜುನ ಖರ್ಗೆ ಧ್ವನಿ ಎತ್ತಬೇಕು. ದೀನ ದಲಿತರು, ರೈತರು, ಹೆಣ್ಣು ಮಕ್ಕಳ ರಕ್ಷಣೆ ಇಲ್ಲದಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ಇದೀಗ ಸುಪ್ರೀಂ ಕೋರ್ಟ್‌ನ 7 ನ್ಯಾಯಾದೀಶರ ಪೀಠವು ಪರಿಶಿಷ್ಟರ ಮೀಸಲಾತಿ ವರ್ಗೀಕರಣ ಮಾಡಲು ರಾಜ್ಯ ಸರ್ಕಾರಕ್ಕೆ ಸಂವಿಧಾನದತ್ತ ಅದಿಕಾರವಿದೆ ಎಂದು ತೀರ್ಪು ನೀಡಿದೆ. ಆದರೆ ತೀರ್ಪು ಬಂದು 19 ದಿನ ಕಳೆದರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರ ದಿವ್ಯ ನಿರ್ಲಕ್ಷ್ಯ ತಾಳಿ ಅನುಷ್ಠಾನಗೊಳಿಸಲು ಮೀನಾ ಮೇಷ ಮಾಡುತ್ತಿದೆ.ಆದ್ದರಿಂದ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಕಛೇರಿಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯ ಸರ್ಕಾರಕ್ಕೆ ಮನವಿ ರವಾನಿಸಲಾಗುವುದು ಎಂದರು

Share with Friends
author avatar
News Desk