BlogLatestರಾಜ್ಯ-Karnataka

ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನಿಧನ

ಬೆಂಗಳೂರು: ಹಿಂದಿನ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ, ಅಂದು ವಿರೋಧ ಪಕ್ಷ ಸ್ಥಾನದಲ್ಲಿದ್ದ ಕಾಂಗ್ರೆಸ್ ‘ಪೇ ಸಿಎಂ’ ಅಭಿಯಾನ ನಡೆಸಲು ಕಾರಣವಾಗಿದ್ದ ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಇಂದು ಗುರುವಾರ ನಿಧನರಾಗಿದ್ದಾರೆ.

ಹೊಸಕೋಟೆಯ ಅವರ ನಿವಾಸದಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೆಂಪಣ್ಣನವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ವಾಪಸ್ಸಾಗಿದ್ದರು. ಆದರೆ ಇಂದು ಬೆಳಗ್ಗೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.

ಹಿಂದೆ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿ ಪ್ರಧಾನಿ ನರೇಂದ್ರ ಮೋದಿಗೂ ಪತ್ರ ಬರೆದು ಸಂಚಲನ ಸೃಷ್ಟಿಸಿದ್ದರು. ಅಷ್ಟೇ ಅಲ್ಲದೆ, ಈಗಿನ ಕಾಂಗ್ರೆಸ್‌ ಸರ್ಕಾರದ ವಿರುದ್ಧವೂ ಕೂಡ ಕವಿಷನ್‌ ಆರೋಪ ಮಾಡಿದ್ದರು. ರಾಜ್ಯದ ಗುತ್ತಿಗೆದಾರರ ಪರ ಹೋರಾಟ ನಡೆಸಿಕೊಂಡು ಬಂದಿದ್ದರು.

ಕೆಂಪಣ್ಣನವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ. ಯಾವುದೇ ಒತ್ತಡ, ಆಮಿಷಗಳಿಗೆ ಒಳಗಾಗದ ನಿರ್ಭೀತ ಧ್ವನಿಯೊಂದನ್ನು ನಾಡು ಇಂದು ಕಳೆದುಕೊಂಡಿದೆ ಎಂದು ಸಂತಾಪದಲ್ಲಿ ತಿಳಿಸಿದ್ದಾರೆ.

ಸಿಎಂ ಸಂತಾಪ :
ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರ ನಿಧನವಾರ್ತೆ ನೋವುಂಟುಮಾಡಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ದೇಶಾದ್ಯಂತ ಸುದ್ದಿ ಮಾಡಿದ್ದ 40% ಕಮಿಷನ್ ಹಗರಣವನ್ನು ಹೊರತಂದು, ಗುತ್ತಿಗೆ ಕಾಮಗಾರಿಗಳಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರದ ವಿರುದ್ಧ ಅವರು ಸೆಟೆದು ನಿಂತಿದ್ದರು.

ಯಾವುದೇ ಒತ್ತಡ, ಆಮಿಷಗಳಿಗೆ ಒಳಗಾಗದ ನಿರ್ಭೀತ ಧ್ವನಿಯೊಂದನ್ನು ನಾಡು ಇಂದು ಕಳೆದುಕೊಂಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.

Share with Friends
author avatar
News Desk