
ದೆಹಲಿಗೆ ಸಿಎಂ ಡಿಕೆಶಿ ದೌಡು : ಹೈಕಮಾಂಡ್ ಭೇಟಿ, ಸಂಪುಟ ವಿಸ್ತರಣೆ ಕುರಿತು ಮಹತ್ವದ ಚರ್ಚೆ ಸಾಧ್ಯತೆ
ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರ ಖಾತೆ ಹಂಚಿಕೆ ಕುರಿತ ಅಸಮಾಧಾನದ ಚರ್ಚೆಗಳು ಜೋರಾಗಿರುವ ನಡುವೆಯೇ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎರಡು ದಿನಗಳ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಈ ವೇಳೆ ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಭೇಟಿ ನಡೆಸಲಿರುವ ಅವರು, ಸಂಪುಟ ವಿಸ್ತರಣೆ ಹಾಗೂ ಖಾತೆ ಹಂಚಿಕೆ ಸೇರಿದಂತೆ ಹಲವು ಮಹತ್ವದ ರಾಜಕೀಯ ವಿಚಾರಗಳ ಕುರಿತು ಚರ್ಚಿಸುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಡಿಕೆ ಶಿವಕುಮಾರ್ ದೆಹಲಿಗೆ ಭೇಟಿ ನೀಡುತ್ತಿದ್ದು, ವಿವಿಧ ಆಡಳಿತಾತ್ಮಕ ಮತ್ತು ರಾಜಕೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಪ್ರವಾಸದ ಮೊದಲ ದಿನ ಅವರು ಎಐಸಿಸಿ ನಾಯಕರನ್ನು ಭೇಟಿ ಮಾಡಿ, ಬಳಿಕ ಎಐಸಿಸಿ ಕಚೇರಿ ಹಾಗೂ ಪಕ್ಷದ ವಿವಿಧ ಮುಂಭಾಗದ ಸಂಘಟನೆಗಳ ಕಚೇರಿಗಳಿಗೆ ಭೇಟಿ ನೀಡಲಿದ್ದಾರೆ. ಸಂಜೆ ಹಿರಿಯ ಐಎಎಸ್ ಅಧಿಕಾರಿಗಳೊಂದಿಗೆ ಸಭೆ ನಡೆಸುವ ಕಾರ್ಯಕ್ರಮವೂ ನಿಗದಿಯಾಗಿದೆ.
ಗುರುವಾರ ನಡೆಯಲಿರುವ ನೀತಿ ಆಯೋಗದ 11ನೇ ಆಡಳಿತ ಮಂಡಳಿ ಸಭೆಯಲ್ಲಿ ಮುಖ್ಯಮಂತ್ರಿ ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆ ವಹಿಸಲಿದ್ದಾರೆ. ಸಭೆಯ ಜೊತೆಗೆ ಪ್ರಧಾನಿಯವರೊಂದಿಗೆ ಪ್ರತ್ಯೇಕವಾಗಿ ಭೇಟಿಯಾಗಲು ಡಿಕೆ ಶಿವಕುಮಾರ್ ಸಮಯ ಕೋರಿದ್ದಾರೆ ಎನ್ನಲಾಗಿದೆ. ರಾಜ್ಯದ ಅಭಿವೃದ್ಧಿ ಯೋಜನೆಗಳು ಹಾಗೂ ಕೇಂದ್ರದ ಸಹಕಾರಕ್ಕೆ ಸಂಬಂಧಿಸಿದ ಹಲವು ವಿಷಯಗಳನ್ನು ಈ ವೇಳೆ ಪ್ರಸ್ತಾಪಿಸುವ ಸಾಧ್ಯತೆ ಇದೆ.
ಇದರ ನಡುವೆಯೇ, ದೆಹಲಿಯ ಕರ್ನಾಟಕ ಭವನದಲ್ಲಿ ಮುಖ್ಯಮಂತ್ರಿ ಆಗಮನಕ್ಕೆ ಭರ್ಜರಿ ಸ್ವಾಗತದ ಸಿದ್ಧತೆಗಳು ನಡೆದಿವೆ. ಈ ಹಿಂದೆ ಕರ್ನಾಟಕ ಭವನದ ಕಾರ್ಯವೈಖರಿ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದ ಡಿಕೆ ಶಿವಕುಮಾರ್ ಅವರ ಭೇಟಿ ಹಿನ್ನೆಲೆಯಲ್ಲಿ ಅಧಿಕಾರಿಗಳು ವಿಶೇಷ ಸಜ್ಜುಗೊಂಡಿದ್ದಾರೆ. ಥಳಿರು ತೋರಣ, ಹೂವಿನ ಅಲಂಕಾರ ಸೇರಿದಂತೆ ವಿವಿಧ ವ್ಯವಸ್ಥೆಗಳ ಮೂಲಕ ಮುಖ್ಯಮಂತ್ರಿಗೆ ಸ್ವಾಗತ ಕೋರಲು ಸಿದ್ಧತೆ ನಡೆಸಲಾಗಿದೆ.
ಹಿರಿಯ ಐಎಎಸ್ ಅಧಿಕಾರಿಗಳ ಸಭೆಯ ಹಿನ್ನೆಲೆಯಲ್ಲಿ ಕರ್ನಾಟಕ ಭವನ ಆವರಣವನ್ನು ಸ್ವಚ್ಛಗೊಳಿಸಿ, ಎಲ್ಲ ವ್ಯವಸ್ಥೆಗಳನ್ನು ಪೂರ್ಣಗೊಳಿಸಲಾಗುತ್ತಿದೆ. ಮುಖ್ಯಮಂತ್ರಿ ಅವರ ಈ ದೆಹಲಿ ಪ್ರವಾಸ ರಾಜಕೀಯ ಹಾಗೂ ಆಡಳಿತಾತ್ಮಕವಾಗಿ ಮಹತ್ವ ಪಡೆದುಕೊಂಡಿದ್ದು, ಹೈಕಮಾಂಡ್ ಜೊತೆಗಿನ ಚರ್ಚೆಗಳತ್ತ ರಾಜ್ಯ ರಾಜಕೀಯ ವಲಯದ ಗಮನ ಕೇಂದ್ರೀಕೃತವಾಗಿದೆ.
