
ನಟಿ ರುಕ್ಮಿಣಿ ವಸಂತ್ AI ಮಾರ್ಫಿಂಗ್ ವಿಡಿಯೋ ಪ್ರಕರಣ : ಸೈಬರ್ ಪೊಲೀಸರ ತನಿಖೆ ಚುರುಕು
ಬೆಂಗಳೂರು, ಜೂ.10: ನಟಿ Rukmini Vasanth ಅವರ ಹೆಸರನ್ನು ದುರುಪಯೋಗಪಡಿಸಿಕೊಂಡು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ಮೂಲಕ ಅಶ್ಲೀಲ ವಿಡಿಯೋಗಳನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಸೈಬರ್ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಆರೋಪಿಗಳ ಪತ್ತೆಗಾಗಿ ವಿವಿಧ ಸಾಮಾಜಿಕ ಜಾಲತಾಣ ಸಂಸ್ಥೆಗಳಿಗೆ ತುರ್ತು ಪತ್ರ ರವಾನಿಸಲಾಗಿದ್ದು, ಶೀಘ್ರದಲ್ಲೇ ಪ್ರಮುಖ ಸುಳಿವುಗಳು ಲಭ್ಯವಾಗುವ ನಿರೀಕ್ಷೆಯಿದೆ.
ನಟಿ ರುಕ್ಮಿಣಿ ವಸಂತ್ ಅವರು ತಮ್ಮ ಚಿತ್ರಗಳನ್ನು ಮತ್ತು ವಿಡಿಯೋಗಳನ್ನು ಎಐ ಹಾಗೂ ಡೀಪ್‌ಫೇಕ್ ತಂತ್ರಜ್ಞಾನದ ಮೂಲಕ ಅಶ್ಲೀಲವಾಗಿ ಮಾರ್ಫ್ ಮಾಡಿರುವ ಬಗ್ಗೆ ದೂರು ದಾಖಲಿಸಿದ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ. ತನಿಖೆಯ ವೇಳೆ ಹತ್ತಾರು ನಕಲಿ ಹಾಗೂ ಅನಾಮಧೇಯ ಖಾತೆಗಳ ಮೂಲಕ ಈ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದ್ದು, ಆ ಖಾತೆಗಳ ವಿವರಗಳು ಹಾಗೂ ಐಪಿ ವಿಳಾಸಗಳನ್ನು ಒದಗಿಸುವಂತೆ ಪೊಲೀಸರು ಸಾಮಾಜಿಕ ಜಾಲತಾಣ ಸಂಸ್ಥೆಗಳನ್ನು ಕೋರಿದ್ದಾರೆ.
ಪೊಲೀಸರ ಪ್ರಕಾರ, ಮುಂದಿನ ಕೆಲವೇ ದಿನಗಳಲ್ಲಿ ಸಂಬಂಧಿತ ಖಾತೆಗಳ ಸಂಪೂರ್ಣ ಮಾಹಿತಿ ಲಭ್ಯವಾಗುವ ಸಾಧ್ಯತೆ ಇದ್ದು, ಆರೋಪಿಗಳನ್ನು ಗುರುತಿಸಿ ಬಂಧಿಸುವ ಪ್ರಕ್ರಿಯೆ ವೇಗ ಪಡೆಯಲಿದೆ. ತಂತ್ರಜ್ಞಾನವನ್ನು ದುರುಪಯೋಗಪಡಿಸಿಕೊಂಡು ವ್ಯಕ್ತಿಗಳ ಗೌರವಕ್ಕೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಹಿಂದೆ ನಟಿಯರಾದ Ramya ಹಾಗೂ Vijayalakshmi ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಹೇಳನಕಾರಿ ಪೋಸ್ಟ್‌ಗಳನ್ನು ಪ್ರಕಟಿಸಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಅದೇ ಮಾದರಿಯಲ್ಲಿ ರುಕ್ಮಿಣಿ ವಸಂತ್ ಪ್ರಕರಣದಲ್ಲೂ ತನಿಖೆ ಮುಂದುವರಿದಿದೆ.
ಇತ್ತೀಚಿನ ದಿನಗಳಲ್ಲಿ ಎಐ ಮತ್ತು ಡೀಪ್‌ಫೇಕ್ ತಂತ್ರಜ್ಞಾನಗಳ ದುರುಪಯೋಗ ಹೆಚ್ಚಾಗುತ್ತಿದ್ದು, ಸೆಲೆಬ್ರಿಟಿಗಳು ಸೇರಿದಂತೆ ಸಾರ್ವಜನಿಕ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ನಕಲಿ ಅಶ್ಲೀಲ ಚಿತ್ರಗಳು ಮತ್ತು ವಿಡಿಯೋಗಳನ್ನು ಸೃಷ್ಟಿಸುವ ಪ್ರಕರಣಗಳು ಹೆಚ್ಚುತ್ತಿವೆ. ಇಂತಹ ಕೃತ್ಯಗಳಿಗೆ ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ವಿವಿಧ ಕಲಂಗಳ ಅಡಿಯಲ್ಲಿ ಕಠಿಣ ಶಿಕ್ಷೆಯಿದೆ. ಅಷ್ಟೇ ಅಲ್ಲದೆ, ಇಂತಹ ಅಶ್ಲೀಲ ಅಥವಾ ಮಾರ್ಫ್ ಮಾಡಿದ ವಿಷಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವುದು, ಫಾರ್ವರ್ಡ್ ಮಾಡುವುದು ಅಥವಾ ಪ್ರಸಾರ ಮಾಡುವುದೂ ಕಾನೂನುಬಾಹಿರವಾಗಿದ್ದು, ಶಿಕ್ಷಾರ್ಹ ಅಪರಾಧವಾಗಿದೆ ಎಂದು ಸೈಬರ್ ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.

Comments are closed.