
ಗೃಹಲಕ್ಷ್ಮಿ ಯೋಜನೆ: ರಾಜ್ಯದಲ್ಲಿ 4.30 ಲಕ್ಷ ಫಲಾನುಭವಿಗಳ ಹೆಸರು ಕೈಬಿಟ್ಟ ಸರ್ಕಾರ
ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ವ್ಯಾಪಕ ಪರಿಷ್ಕರಣೆ ನಡೆಸಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಜ್ಯಾದ್ಯಂತ ಸುಮಾರು 4.30 ಲಕ್ಷ ಫಲಾನುಭವಿಗಳ ಹೆಸರನ್ನು ಪಟ್ಟಿಯಿಂದ ತೆಗೆದುಹಾಕಿದೆ. ಮೃತ ವ್ಯಕ್ತಿಗಳ ಖಾತೆಗಳಿಗೆ ಯೋಜನೆಯ ಹಣ ಜಮೆಯಾಗುತ್ತಿರುವುದು ಹಾಗೂ ಯೋಜನೆಯ ದುರ್ಬಳಕೆ ನಡೆಯುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಈ ಮರುಪರಿಶೀಲನಾ ಕಾರ್ಯ ಕೈಗೊಳ್ಳಲಾಗಿದೆ.
ಇದರ ಅಂಗವಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆಶಾ ಕಾರ್ಯಕರ್ತೆಯರ ಮೂಲಕ ಮಾಹಿತಿ ಸಂಗ್ರಹಿಸಿ ಪರಿಶೀಲನೆ ನಡೆಸಲಾಗಿದೆ. ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 1.20 ಕೋಟಿಗೂ ಹೆಚ್ಚು ಮಹಿಳೆಯರು ನೋಂದಾಯಿಸಿಕೊಂಡಿದ್ದು, ಪರಿಶೀಲನೆ ವೇಳೆ ಮೃತಪಟ್ಟ ಫಲಾನುಭವಿಗಳು ಸೇರಿದಂತೆ ಅನರ್ಹರು ಪತ್ತೆಯಾಗಿದ್ದಾರೆ.
ಪರಿಶೀಲನೆಯ ಬಳಿಕ 4.30 ಲಕ್ಷ ಫಲಾನುಭವಿಗಳ ಹೆಸರನ್ನು ಪಟ್ಟಿಯಿಂದ ಅಳಿಸಲಾಗಿದೆ. ಇದರಿಂದ ಸರ್ಕಾರಕ್ಕೆ ನೂರಾರು ಕೋಟಿ ರೂಪಾಯಿ ಉಳಿತಾಯವಾಗುವ ನಿರೀಕ್ಷೆಯಿದೆ ಎಂದು ಇಲಾಖೆ ಮೂಲಗಳು ತಿಳಿಸಿವೆ.
ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಒಟ್ಟು 2,08,030 ಮಹಿಳೆಯರು ನೋಂದಾಯಿಸಿಕೊಂಡಿದ್ದರು. ಪರಿಶೀಲನೆ ವೇಳೆ 6,624 ಮೃತ ಫಲಾನುಭವಿಗಳ ಖಾತೆಗಳಿಗೆ ಯೋಜನೆಯ ಹಣ ಜಮೆಯಾಗಿರುವುದು ಪತ್ತೆಯಾಗಿದೆ. ಜೊತೆಗೆ ಆದಾಯ ತೆರಿಗೆ ಹಾಗೂ ಜಿಎಸ್‌ಟಿ ಪಾವತಿಸುತ್ತಿರುವ 4,800 ಮಂದಿ ಫಲಾನುಭವಿಗಳೂ ಗುರುತಿಸಲ್ಪಟ್ಟಿದ್ದಾರೆ.
ಈ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಒಟ್ಟು 12,719 ಫಲಾನುಭವಿಗಳ ಹೆಸರನ್ನು ಗೃಹಲಕ್ಷ್ಮಿ ಯೋಜನೆಯ ಪಟ್ಟಿಯಿಂದ ಕೈಬಿಡಲಾಗಿದೆ. ಯೋಜನೆಯ ಪಾರದರ್ಶಕತೆ ಹೆಚ್ಚಿಸುವುದು ಹಾಗೂ ಅರ್ಹ ಮಹಿಳೆಯರಿಗೆ ಮಾತ್ರ ಸೌಲಭ್ಯ ತಲುಪಿಸುವ ಉದ್ದೇಶದಿಂದ ರಾಜ್ಯಾದ್ಯಂತ ಪರಿಶೀಲನಾ ಕಾರ್ಯ ಮುಂದುವರಿಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸ್ಪಷ್ಟಪಡಿಸಿದೆ.
