Crime NewsLatestಬೆಂಗಳೂರು-Bengaluru

ಮೊಮ್ಮಕ್ಕಳನ್ನು ಶಾಲೆಗೆ ಬಿಡಲು ಹೋಗುತ್ತಿದ್ದ ವೃದ್ಧ ವಾಟರ್ ಟ್ಯಾಂಕರ್ ಹರಿದು ಸಾವು..!

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಮೊಮ್ಮಕ್ಕಳನ್ನು ಶಾಲೆಗೆ ಬಿಡಲು ಹೋಗುತ್ತಿದ್ದ ವೃದ್ಧರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ.

ಗುರುವಾರ ಬೆಳಿಗ್ಗೆ ವೃದ್ಧರೊಬ್ಬರು ತಮ್ಮ ಮೊಮ್ಮಕ್ಕಳನ್ನು ಬೈಕ್‌ನಲ್ಲಿ ಕೂರಿಸಿಕೊಂಡು ಶಾಲೆಗೆ ಬಿಡಲು ಹೋಗುತ್ತಿದ್ದರು. ಈ ವೇಳೆ ಯಲಹಂಕ ಬಳಿ ವೇಗವಾಗಿ ಬಂದ ವಾಟರ್ ಟ್ಯಾಂಕರ್ ನಿಯಂತ್ರಣ ತಪ್ಪಿ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬೈಕ್‌ನಿಂದ ಕೆಳಗೆ ಬಿದ್ದ ವೃದ್ಧನ ಮೇಲೆ ವಾಟರ್ ಟ್ಯಾಂಕರ್ ಚಕ್ರ ಹರಿದ ಪರಿಣಾಮ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಬೈಕ್‌ನಲ್ಲಿದ್ದ ಇಬ್ಬರು ಶಾಲಾ ಮಕ್ಕಳು ಅದೃಷ್ಟವಶಾತ್ ರಸ್ತೆಯ ಮತ್ತೊಂದು ಬದಿಗೆ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಮಕ್ಕಳಿಬ್ಬರೂ ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ಸಂಭವಿಸುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಯಲಹಂಕ ನ್ಯೂ ಟೌನ್ ಸಂಚಾರಿ ಠಾಣಾ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ವಾಟರ್ ಟ್ಯಾಂಕರ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Share with Friends
author avatar
Digital Desk