
ಗುಣಮಟ್ಟದೊಂದಿಗೆ ನಿಗದಿತ ಅವಧಿಯಲ್ಲಿ ಮುಗಿಸಲು ಅಧಿಕಾರಿಗಳಿಗೆ ಗಡುವು!
ಕೋಲಾರ: ಮಾಲೂರು ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಬಹುನಿರೀಕ್ಷಿತ ಮೇಲ್ಸೇತುವೆ ಕಾಮಗಾರಿ ಸ್ಥಳಕ್ಕೆ ಮಾಲೂರು ತಾಲೂಕು ಶಾಸಕರು ಹಾಗೂ ಕೋಮುಲ್ ಅಧ್ಯಕ್ಷರಾದ ಶ್ರೀ ಕೆ. ವೈ. ನಂಜೇಗೌಡರವರು ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದರು.
ಇತ್ತೀಚಿನ ದಿನಗಳಲ್ಲಿ ಮಾಲೂರು ನಗರದಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಾಗಿದ್ದು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಉದ್ಯೋಗಸ್ಥರು, ವ್ಯಾಪಾರಸ್ಥರು, ರೈತರು ಹಾಗೂ ಸಾರ್ವಜನಿಕರು ನಿತ್ಯವೂ ತೀವ್ರ ತೊಂದರೆ ಅನುಭವಿಸುತ್ತಿರುವ ಕುರಿತು ಸಾರ್ವಜನಿಕರಿಂದ ನಿರಂತರವಾಗಿ ದೂರುಗಳು ಬಂದ ಹಿನ್ನೆಲೆಯಲ್ಲಿ ಶಾಸಕರು ಈ ತ್ವರಿತ ಕ್ರಮ ಕೈಗೊಂಡಿದ್ದಾರೆ.

ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ: ಸ್ಥಳದಲ್ಲೇ ಜನಪ್ರತಿನಿಧಿಗಳು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು, ಇಂಜಿನಿಯರ್ಗಳು ಹಾಗೂ ಸ್ಥಳೀಯ ಮುಖಂಡರೊಂದಿಗೆ ಚರ್ಚೆ ನಡೆಸಿದ ಶಾಸಕರು, ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ವಾಹನ ಸಂಚಾರ ಸುಗಮವಾಗಲು ತಕ್ಷಣವೇ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ತಾಲೂಕಿನ ಈ ಮಹತ್ವಾಕಾಂಕ್ಷಿ ಮೇಲ್ಸೇತುವೆ ಕಾಮಗಾರಿಯ ಗುಣಮಟ್ಟದಲ್ಲಿ ಯಾವುದೇ ಕಾರಣಕ್ಕೂ ರಾಜಿ ಮಾಡಿಕೊಳ್ಳಬಾರದು. ಸಾರ್ವಜನಿಕರ ಹಣ ಸಮರ್ಪಕವಾಗಿ ಬಳಕೆಯಾಗಬೇಕು ಮತ್ತು ನಿಗದಿತ ಅವಧಿಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.

ಪರ್ಯಾಯ ಸಂಚಾರ ವ್ಯವಸ್ಥೆ: ಕಾಮಗಾರಿ ನಡೆಯುವ ಅವಧಿಯಲ್ಲಿ ಸಾರ್ವಜನಿಕರಿಗೆ ಕನಿಷ್ಠ ತೊಂದರೆಯೂ ಆಗದಂತೆ ಪರ್ಯಾಯ ಸಂಚಾರ ವ್ಯವಸ್ಥೆ ಕಲ್ಪಿಸಬೇಕು. ಸುರಕ್ಷತಾ ಕ್ರಮಗಳು, ಎಚ್ಚರಿಕೆ ಫಲಕಗಳು ಹಾಗೂ ಸಂಚಾರ ನಿಯಂತ್ರಣಕ್ಕೆ ಅಗತ್ಯ ಸಿಬ್ಬಂದಿಯನ್ನು ನಿಯೋಜಿಸುವ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.
ಸಾರ್ವಜನಿಕರ ಅನುಕೂಲವೇ ನಮ್ಮ ಮೊದಲ ಆದ್ಯತೆ” ಎಂಬ ಸ್ಪಷ್ಟ ಸಂದೇಶದೊಂದಿಗೆ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಶಾಸಕರು ಮುಂದಾಗಿದ್ದಾರೆ. ಜನರ ಧ್ವನಿಗೆ ಸದಾ ಸ್ಪಂದಿಸುತ್ತಾ, ಅಭಿವೃದ್ಧಿಯ ಜೊತೆಗೆ ಸಾರ್ವಜನಿಕರ ಹಿತಾಸಕ್ತಿಯನ್ನು ಕಾಪಾಡುವ ಬದ್ಧತೆಯೊಂದಿಗೆ ಕಾರ್ಯನಿರ್ವಹಿಸುತ್ತಿರುವ ಶಾಸಕರಾದ ಶ್ರೀ ಕೆ. ವೈ. ನಂಜೇಗೌಡರ ಈ ತ್ವರಿತ ಕ್ರಮಕ್ಕೆ ಮಾಲೂರು ಸಾರ್ವಜನಿಕರು ತೀವ್ರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
