
ಅನ್ನಭಾಗ್ಯ ಅಕ್ಕಿ ಅಕ್ರಮವಾಗಿ ಸಂಗ್ರಹಿಸಿಟ್ಟ ದಂಧೆಕೋರರು..!
ಯಾದಗಿರಿ: ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಮಾರಾಟಕ್ಕೆ ಸಿದ್ಧಪಡಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಸುಮಾರು 40 ಕ್ವಿಂಟಲ್ ಅನ್ನಭಾಗ್ಯ ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ.
ಈ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಉಕ್ಕಿನಾಳ ತಾಂಡಾ ವ್ಯಾಪ್ತಿಯ ಜಮೀನೊಂದರಲ್ಲಿರುವ ಖಾಸಗಿ ಗೋಡೌನ್ನಲ್ಲಿ ನಡೆದಿದೆ. ಗೋಡೌನ್ನಲ್ಲಿ ಮೂಟೆ ಮೂಟೆಯಾಗಿ ಸಂಗ್ರಹಿಸಿಟ್ಟಿದ್ದ ಅನ್ನಭಾಗ್ಯ ಅಕ್ಕಿಯನ್ನು ಅಧಿಕಾರಿಗಳು ಪರಿಶೀಲಿಸಿ ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಅಧಿಕಾರಿಗಳು ಅಕ್ಕಿಯ ಮೂಲ, ಅಕ್ರಮ ಸಂಗ್ರಹ ಹಾಗೂ ಸಾಗಾಟದ ಬಗ್ಗೆ ತನಿಖೆ ಆರಂಭಿಸಿದ್ದಾರೆ. ವಶಪಡಿಸಿಕೊಂಡ ಅಕ್ಕಿಯನ್ನು ಇಲಾಖೆಯ ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಈ ಸಂಬಂಧ ಅಕ್ರಮ ಸಂಗ್ರಹ ಹಾಗೂ ಸಾರ್ವಜನಿಕ ವಿತರಣಾ ವ್ಯವಸ್ಥೆ (PDS) ನಿಯಮ ಉಲ್ಲಂಘನೆ ಆರೋಪದಡಿ ಗೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ. ಈ ಅಕ್ರಮ ಜಾಲದ ಹಿಂದೆ ಇನ್ನೂ ಯಾರ್ಯಾರು ಇದ್ದಾರೆ ಎಂಬ ಬಗ್ಗೆ ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಸರ್ಕಾರದ ಯೋಜನೆಗಳ ದುರುಪಯೋಗ ಮಾಡುವವರ ವಿರುದ್ಧ ಇಂತಹ ದಾಳಿಗಳು ಮುಂದುವರಿಯಲಿವೆ ಎಂದು ಎಚ್ಚರಿಕೆ ನೀಡಿದ್ದಾರೆ.
