
ನೀಟ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಬಾಗಲಕೋಟೆ: ನೀಟ್ ಪರೀಕ್ಷೆ ಸಂಬಂಧ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ, ಕಾಂಗ್ರೆಸ್ ವಿರುದ್ಧ ಬಾಗಲಕೋಟೆಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನವನಗರದ ಬಿಜೆಪಿ ಕಾರ್ಯಾಲಯದಿಂದ ಜಿಲ್ಲಾಧಿಕಾರಿ (ಡಿಸಿ) ಕಚೇರಿವರೆಗೆ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ವೇಳೆ ವಿದ್ಯಾರ್ಥಿಗಳೂ ಬಿಜೆಪಿ ಕಾರ್ಯಕರ್ತರಿಗೆ ಬೆಂಬಲ ಸೂಚಿಸಿ ಮಾನವ ಸರಪಳಿ ನಿರ್ಮಿಸಿ ಕೆಲಕಾಲ ರಸ್ತೆ ತಡೆ ನಡೆಸಿದರು. ಈ ವೇಳೆ ನೀಟ್ ಪರೀಕ್ಷೆ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಶಾಂತಗೌಡ ಪಾಟೀಲ್, ಮಾಜಿ ಶಾಸಕ ವೀರಣ್ಣ ಚರಂತಿಮಠ ಸೇರಿದಂತೆ ಹಲವು ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪ್ರತಿಭಟನೆಯ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿತ್ತು.
