
ನೀಟ್ ಕಿಚ್ಚಿಗೆ ಧರ್ಮೇಂದ್ರ ಪ್ರಧಾನ್ ತಲೆದಂಡ
ನವದೆಹಲಿ,ಜು25: ಸಿಜೆಪಿ ಬೇಡಿಕೆಗೆ ಕೊನೆಗೂ ಕೇಂದ್ರ ಸರ್ಕಾರ ಮಣಿದಿದ್ದು, ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಸಲ್ಲಿಸಿದ್ದಾರೆ.
ಸದ್ಯ ಕಾಕ್ರೋಚ್ ಜನತಾ ಪಾರ್ಟಿ ದೆಹಲಿ ಜಂತರ್ ಮಂತರ್ನಲ್ಲಿ ನಿರಂತರ ಪ್ರತಿಭಟನೆ ನಡೆಸಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಲೇಬೇಕೆಂದು ಪಟ್ಟು ಹಿಡಿದಿತ್ತು. ಅಂತಿಮವಾಗಿ ಧರ್ಮೇಂದ್ರ ಪ್ರಧಾನ್ ತಮ್ಮ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ವಿದ್ಯಾರ್ಥಿಗಳ ಪ್ರತಿಭಟನೆಗೆ ಪರಿಹಾರ ಕಂಡುಹಿಡಿಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮತ್ತು ಕಾಕ್ರೋಚ್ ಜನತಾ ಪಾರ್ಟಿ ನಡುವೆ ಇಂದು 3ನೇ ಸುತ್ತಿನ ಮಾತುಕತೆ ನಡೆಯುವುದಿತ್ತು. ಮಧ್ಯಾಹ್ನ 3 ಗಂಟೆಗೆ ಮಹತ್ವದ ಸಭೆ ಕೂಡ ನಿಗದಿಯಾಗಿತ್ತು. ಆದರೆ ಅದಕ್ಕೂ ಮುನ್ನವೇ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದು, ಯುವ ಸಮೂಹಕ್ಕೆ ಅತಿದೊಡ್ಡ ಗೆಲುವು ಸಿಕ್ಕಂತಾಗಿದೆ.
ನಿನ್ನೆ ಕೇಂದ್ರ ಸಚಿವರಾದ ಜೆಪಿ ನಡ್ಡಾ ಮತ್ತು ಜಿತೇಂದ್ರ ಸಿಂಗ್ ರನ್ನು ಭೇಟಿಯಾಗಿದ್ದ ಸಿಜೆಪಿ ವಕ್ತಾರರು ತಮ್ಮ 3 ಬೇಡಿಕೆಗಳನ್ನು ಸಲ್ಲಿಸಿದ್ದರು. ಅದರಲ್ಲಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆಯೇ ಮೊದಲ ಮತ್ತು ಮುಖ್ಯವಾದ ಬೇಡಿಕೆಯಾಗಿತ್ತು. ಸಂಧಾನ ಮಾತುಕತೆಯ ವೇಳೆ ಉಳಿದ ಎರಡು ಬೇಡಿಕೆಗಳಿಗೆ ಕೂಡಲೇ ಒಪ್ಪಿಗೆ ಸೂಚಿಸಿದ್ದ ಕೇಂದ್ರ ಸಚಿವರು ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕುರಿತು ನಿರ್ಧಾರ ತೆಗೆದುಕೊಳ್ಳಲು ಇಂದು ಮಧ್ಯಾಹ್ನದವರೆಗೆ ಸಮಯ ಕೋರಿದ್ದರು.ಆದರೆ ಅದರೊಳಗೆ ಧರ್ಮೇಂದ್ರ ಪ್ರಧಾನ್ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿಗೆ ಸಲ್ಲಿಸಿದ 2 ಪುಟಗಳ ರಾಜೀನಾಮೆ ಪತ್ರವನ್ನು ಧರ್ಮೇಂದ್ರ ಪ್ರಧಾನ್ ತಮ್ಮ ಸೋಷಿಯಲ್ ಮೀಡಿಯಾ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಪ್ರಧಾನಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.
ಈ ವಿಚಾರವನ್ನು ರಾಷ್ಟ್ರವಿರೋಧಿ ಶಕ್ತಿಗಳು ಗೊಂದಲ ಸೃಷ್ಟಿಸಲು ಮತ್ತು ತಮ್ಮ ಸ್ವಾರ್ಥಕ್ಕಾಗಿ ದುರುಪಯೋಗಪಡಿಸಿಕೊಳ್ಳದಂತೆ ತಡೆಯುವ ಉದ್ದೇಶದಿಂದ ನಾನು ಈ ನಿರ್ಧಾರ ಕೈಗೊಂಡಿದ್ದೇನೆ. ದೇಶದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಹುದ್ದೆಯಿಂದ ಕೆಳಗಿಳಿಯಲು ನಿರ್ಧರಿಸಿದ್ದೇನೆʼ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಈ ನಡುವೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಳಿಕ ಎಕ್ಸ್ನಲ್ಲಿ ಪ್ರತಿಕ್ರಿಯಿಸಿದ ಸಿಜೆಪಿ,ಶಿಕ್ಷಣ ಸಚಿವರು ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ, ವಿದ್ಯಾರ್ಥಿ ಶಕ್ತಿಗೆ ಜಯವಾಗಲಿ ಎಂದು ಬರೆದುಕೊಂಡಿದೆ.
ಇದಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಸಿಜೆಪಿ ವಕ್ತಾರ ಅಶುತೋಷ್ ರಾಂಕಾ, ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರೊಂದಿಗಿನ ಭೇಟಿ ಫಲಪ್ರದವಾಗಿದೆ.ಧರ್ಮೇಂದ್ರ ಪ್ರಧಾನ್ ರಾಜೀನಾಮೆ ವಿಷಯದಲ್ಲಿ ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಿದ ನಂತರ ಸಿಜೆಪಿ ತನ್ನ ಮುಂದಿನ ನಡೆಯನ್ನು ನಿರ್ಧರಿಸಲಿದೆ ಎಂದು ಹೇಳಿದ್ದರು.
