
ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಜೀವಾವಧಿ ಶಿಕ್ಷೆಗೆ ಹೈಕೋರ್ಟ್ ತಡೆ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಅವರಿಗೆ ಕರ್ನಾಟಕ ಹೈಕೋರ್ಟ್ ಮಹತ್ವದ ರಿಲೀಫ್ ನೀಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿ, ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದ್ದು, ವಿನಯ್ ಕುಲಕರ್ಣಿ ಸೇರಿದಂತೆ ಪ್ರಕರಣದ ಇತರೆ ದೋಷಿಗಳ ಶಿಕ್ಷೆಯನ್ನೂ ಅಮಾನತುಗೊಳಿಸಿದೆ. ನ್ಯಾಯಾಲಯದ ಷರತ್ತುಗಳಂತೆ ₹5 ಲಕ್ಷ ಮೌಲ್ಯದ ವೈಯಕ್ತಿಕ ಬಾಂಡ್, ಇಬ್ಬರು ಶೂರಿಟಿದಾರರನ್ನು ಒದಗಿಸಬೇಕು ಹಾಗೂ ನ್ಯಾಯಾಲಯದ ಅನುಮತಿ ಇಲ್ಲದೆ ದೇಶ ತೊರೆಯಬಾರದು ಎಂದು ಸೂಚಿಸಿದೆ. ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 10 ಮಂದಿಗೆ ಜಾಮೀನು ಮಂಜೂರಾಗಿದೆ.
ವಿಶೇಷ ನ್ಯಾಯಾಲಯದ ದೋಷಿ ತೀರ್ಪಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿರುವ ಹಿನ್ನೆಲೆಯಲ್ಲಿ, ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನಕ್ಕೆ ಎದುರಾಗಿದ್ದ ಕಾನೂನು ಅಡಚಣೆಗಳು ತಾತ್ಕಾಲಿಕವಾಗಿ ದೂರವಾದಂತಾಗಿದೆ.
ಪ್ರಕರಣದ ಹಿನ್ನೆಲೆ
2016ರ ಜೂನ್ 15ರಂದು ಧಾರವಾಡದ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯ ಜಿಮ್‌ನಲ್ಲಿ ಬಿಜೆಪಿ ಮುಖಂಡ ಯೋಗೀಶ್ ಗೌಡ ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದಿದ್ದರು. ಈ ಪ್ರಕರಣ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು.
ವಕೀಲರ ಪ್ರತಿಕ್ರಿಯೆ
ವಿನಯ್ ಕುಲಕರ್ಣಿ ಪರ ವಕೀಲ ಸುನೀಲ್ ಮಾತನಾಡಿ, “ನಾವು ಎರಡು ಅರ್ಜಿಗಳನ್ನು ಸಲ್ಲಿಸಿದ್ದೆವು. ನ್ಯಾಯಾಲಯ ನಮ್ಮ ಅರ್ಜಿಯನ್ನು ಪುರಸ್ಕರಿಸಿದೆ. ಹಿರಿಯ ವಕೀಲ ಸಿ.ವಿ. ನಾಗೇಶ್ ಅವರು ವಿನಯ್ ಕುಲಕರ್ಣಿ ಪರ ವಾದ ಮಂಡಿಸಿದ್ದರು. ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಅವರ ಪಾತ್ರ ಇಲ್ಲ ಎಂಬುದನ್ನು ನ್ಯಾಯಾಲಯದ ಮುಂದೆ ವಿವರಿಸಿದ್ದೇವೆ,” ಎಂದು ಹೇಳಿದರು.
ಇಂದೇ ವಿನಯ್ ಕುಲಕರ್ಣಿ ಬಿಡುಗಡೆಯಾಗುತ್ತಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಹೈಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ವಿಶೇಷ ನ್ಯಾಯಾಲಯದ ಆದೇಶಕ್ಕೂ ತಡೆ ನೀಡಿದೆ. ಆದರೆ ಆದೇಶದ ದೃಢೀಕೃತ ಪ್ರತಿ ಇನ್ನೂ ಲಭ್ಯವಾಗಿಲ್ಲ. ಅದು ಬಂದ ಬಳಿಕ ಕೆಳಹಂತದ ನ್ಯಾಯಾಲಯದಲ್ಲಿ ಅಗತ್ಯ ಅರ್ಜಿ ಸಲ್ಲಿಸಿ ಬಿಡುಗಡೆ ಪ್ರಕ್ರಿಯೆ ಪೂರ್ಣಗೊಳಿಸುತ್ತೇವೆ,” ಎಂದು ತಿಳಿಸಿದರು.
ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ
ಹೈಕೋರ್ಟ್ ತೀರ್ಪು ಹೊರಬಿದ್ದ ತಕ್ಷಣ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು. ನಗರದ ಕಾರವಾರ ರಸ್ತೆ ಬಂದ್ ಮಾಡಿ ವಿಜಯೋತ್ಸವ ಆಚರಿಸಿ, ವಿನಯ್ ಕುಲಕರ್ಣಿ ಪರ ಘೋಷಣೆಗಳನ್ನು ಕೂಗಿದರು. ಪೊಲೀಸರ ಬಿಗಿ ಬಂದೋಬಸ್ತಿನ ನಡುವೆ ಸಂಭ್ರಮಾಚರಣೆ ನಡೆಯಿತು.
