
ಜಯ ಮೃತ್ಯುಂಜಯ ಸ್ವಾಮೀಜಿ ಕುರಿತು ಅವಾಚ್ಯ ಶಬ್ದ ಬಳಕೆ : ಸಚಿವ ಕಾಶಪ್ಪನವರ್ ಪ್ರತಿಕೃತಿ ದಹಿಸಿ ಪ್ರತಿಭಟನೆ
ಹುಬ್ಬಳ್ಳಿ: ಪಂಚಮಸಾಲಿ ಪೀಠದ ಪ್ರಥಮ ಜಗದ್ಗುರು ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿಗಳ ವಿರುದ್ಧ ಸಚಿವ ಕಾಶಪ್ಪನವರ್ ಅವಹೇಳನಕಾರಿ ಹಾಗೂ ಅವಾಚ್ಯ ಶಬ್ದಗಳನ್ನು ಬಳಸಿ ನಿಂದಿಸಿದ್ದಾರೆ ಎಂದು ಆರೋಪಿಸಿ ಕುಂದಗೋಳ ತಾಲೂಕು ಪಂಚಮಸಾಲಿ ಸಮುದಾಯದ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕುಂದಗೋಳ ಪಟ್ಟಣದಲ್ಲಿ ಹುಬ್ಬಳ್ಳಿ–ಲಕ್ಷ್ಮೇಶ್ವರ ರಾಜ್ಯ ಹೆದ್ದಾರಿ ತಡೆದು ಸಚಿವ ಕಾಶಪ್ಪನವರ್ ಅವರ ಪ್ರತಿಕೃತಿ ದಹಿಸಿ ಸಮುದಾಯದ ಮುಖಂಡರು ಉಗ್ರ ಪ್ರತಿಭಟನೆ ನಡೆಸಿದರು. ತಾಲೂಕು ಅಧ್ಯಕ್ಷ ನಾಗರಾಜ್ ದೇಶಪಾಂಡೆ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಚಿವರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು.
ಪಂಚಮಸಾಲಿ ಪೀಠದ ಜಯ ಮೃತ್ಯುಂಜಯ ಸ್ವಾಮೀಜಿಗಳನ್ನು ಪದೇಪದೇ ಅವಾಚ್ಯ ಶಬ್ದಗಳಿಂದ ನಿಂದಿಸುವುದು ಹಾಗೂ ಅವಹೇಳನಕಾರಿ ಹೇಳಿಕೆಗಳನ್ನು ನೀಡುವುದು ಖಂಡನೀಯ ಎಂದು ಪ್ರತಿಭಟನಾಕಾರರು ಹೇಳಿದರು.
ಅಧಿಕಾರ ಇಲ್ಲದ ಸಂದರ್ಭದಲ್ಲಿ ಸ್ವಾಮೀಜಿಗಳ ರಕ್ಷಣೆ ಹಾಗೂ ಬೆಂಬಲ ಬೇಕಾಗಿತ್ತು. ಆದರೆ ಅಧಿಕಾರಕ್ಕೆ ಬಂದ ಬಳಿಕ ಪಂಚಮಸಾಲಿ ಸಮಾಜದ ಅಭಿವೃದ್ಧಿ ಕಾರ್ಯಗಳಿಗೆ ಸ್ಪಂದಿಸದೆ, ಮಾಧ್ಯಮಗಳ ಮುಂದೆ ಸ್ವಾಮೀಜಿಗಳ ವಿರುದ್ಧ ಮನಬಂದಂತೆ ಹೇಳಿಕೆ ನೀಡುತ್ತಿರುವುದು ಕೀಳು ಮಟ್ಟದ ರಾಜಕೀಯ ಎಂದು ಮುಖಂಡರು ಆರೋಪಿಸಿದರು.
ಇದೇ ವೇಳೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪಂಚಮಸಾಲಿ ಸಮುದಾಯಕ್ಕೆ ಸಚಿವ ಸ್ಥಾನ ನೀಡಿದ್ದರೂ, ಸಚಿವ ಕಾಶಪ್ಪನವರ್ ಅವರು ಸಮುದಾಯದ ಹಿತಾಸಕ್ತಿಗೆ ಸ್ಪಂದಿಸುತ್ತಿಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ನಿರಂತರ ಹೋರಾಟ, ಪ್ರತಿಭಟನೆ ಹಾಗೂ ಪಾದಯಾತ್ರೆಗಳನ್ನು ನಡೆಸಿ ರಾಜ್ಯದ ಪಂಚಮಸಾಲಿಗಳಲ್ಲಿ ಜಾಗೃತಿ ಮೂಡಿಸಿದ ಜಯ ಮೃತ್ಯುಂಜಯ ಸ್ವಾಮೀಜಿಗಳ ವಿರುದ್ಧ ನಿರಂತರ ಆರೋಪ–ಅಪವಾದಗಳನ್ನು ಮಾಡಲಾಗುತ್ತಿದೆ ಎಂದು ಮುಖಂಡರು ಆರೋಪಿಸಿದರು.
ಸ್ವಾಮೀಜಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಸಚಿವ ಕಾಶಪ್ಪನವರ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಅಗತ್ಯವಿದ್ದರೆ ಸಚಿವ ಸ್ಥಾನದಿಂದ ಅವರನ್ನು ವಜಾಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಇಲ್ಲವಾದಲ್ಲಿ ರಾಜ್ಯಾದ್ಯಂತ ಪಂಚಮಸಾಲಿ ಸಮುದಾಯದವರು ತೀವ್ರ ಹೋರಾಟ ನಡೆಸಲಿದ್ದು, ಮುಂಬರುವ ದಿನಗಳಲ್ಲಿ ಸರ್ಕಾರಕ್ಕೆ ಹಾಗೂ ಸಚಿವರಿಗೆ ತಕ್ಕ ಉತ್ತರ ನೀಡಲಾಗುವುದು ಎಂದು ಕುಂದಗೋಳ ತಾಲೂಕು ಪಂಚಮಸಾಲಿ ಸಮಾಜದ ಮುಖಂಡರು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ತಾಲೂಕು ಅಧ್ಯಕ್ಷ ನಾಗರಾಜ್ ದೇಶಪಾಂಡೆ, ಪಂಚಮಸಾಲಿ ಸಮಾಜದ ಮುಖಂಡ ಬಸವರಾಜ್ ನಾವಳ್ಳಿ ಹಾಗೂ ಮಾಜಿ ತಾಲೂಕು ಅಧ್ಯಕ್ಷ ಮಲ್ಲಣ್ಣ ಮರಡಗಿ ಸೇರಿದಂತೆ ಹಲವು ಮುಖಂಡರು ಹಾಗೂ ಸಮುದಾಯದ ಕಾರ್ಯಕರ್ತರು ಭಾಗವಹಿಸಿದ್ದರು.
