
ಕುರ್ಕುರೇ ಪಾಕೇಟ್‌ನಲ್ಲಿ ಗಾಂಜಾ ಚಾಕ್ಲೇಟ್..! : ಖತರ್ನಾಕ್ ಡ್ರಗ್ಸ್ ಜಾಲ ಬಯಲಿಗೆ
ಬೆಳಗಾವಿ: ಕುರ್ಕುರೇ ಪಾಕೇಟ್‌ಗಳನ್ನೇ ಬಳಸಿ ಗಾಂಜಾ ಚಾಕ್ಲೇಟ್ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬೆಳಗಾವಿಯ ಉದ್ಯಮಭಾಗ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಭೋಲು ಪ್ರಜಾಪತಿ ಎಂದು ಗುರುತಿಸಲಾಗಿದೆ.
ಆರೋಪಿ ಕುರ್ಕುರೇ ಪಾಕೇಟ್‌ಗಳಲ್ಲಿ ಗಾಂಜಾ ತುಂಬಿದ ಚಾಕ್ಲೇಟ್‌ಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಉದ್ಯಮಭಾಗ ಪೊಲೀಸರು ಆರೋಪಿಯನ್ನು ಬಂಧಿಸಿ, ಆತನಿಂದ ₹54 ಸಾವಿರ ಮೌಲ್ಯದ 6 ಕೆಜಿ ಗಾಂಜಾ ಚಾಕ್ಲೇಟ್‌ಗಳನ್ನು ವಶಕ್ಕೆ ಪಡೆದಿದ್ದಾರೆ.
ಇದರ ಜೊತೆಗೆ ಆರೋಪಿಗೆ ಸೇರಿದ ಸ್ಕೂಟಿ ಹಾಗೂ ಮೊಬೈಲ್ ಫೋನ್ ನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೌಲ್ಯ ಸುಮಾರು ₹94 ಸಾವಿರ ಎಂದು ತಿಳಿದುಬಂದಿದೆ.
ಈ ಕುರಿತು ಬೆಳಗಾವಿ ಪೊಲೀಸ್ ಕಮಿಷನರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಪೊಲೀಸರು ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದ್ದು, ಉದ್ಯಮಭಾಗ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪ್ರಕರಣದ ಮುಂದಿನ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ.
