
ಮಂಡ್ಯದಲ್ಲಿ ಮತ್ತೆ ಭುಗಿಲೆದ್ದ ಕಾವೇರಿ ಕಿಚ್ಚು : ಸರ್ಕಾರಕ್ಕೆ ಎಳ್ಳುನೀರು ಬಿಟ್ಟು ಹೋರಾಟ
ಮಂಡ್ಯ: ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಹರಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಮತ್ತೆ ಕಾವೇರಿ ಕಿಚ್ಚು ಭುಗಿಲೆದ್ದಿದೆ.
ನೀರು ಬಿಡುವುದಿಲ್ಲ ಎಂದು ಹೇಳಿ ಇದೀಗ ನೀರು ಹರಿಸಿದ ರಾಜ್ಯ ಸರ್ಕಾರದ ವಿರುದ್ಧ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರದ ವಿರುದ್ಧ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದ ಮಂಡ್ಯ ರಕ್ಷಣಾ ವೇದಿಕೆ ಕಾರ್ಯಕರ್ತರು, ಕಾವೇರಿ ನದಿಯಲ್ಲಿ ಎಳ್ಳುನೀರು ಬಿಟ್ಟು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಂಡ್ಯ ರಕ್ಷಣಾ ವೇದಿಕೆ ಅಧ್ಯಕ್ಷ ಶಂಕರ್ ಬಾಬು ನೇತೃತ್ವದಲ್ಲಿ ಶ್ರೀರಂಗಪಟ್ಟಣದ ಸ್ನಾನಘಟ್ಟದಲ್ಲಿ ಪ್ರತಿಭಟನೆ ನಡೆಯಿತು. ಕಾವೇರಿ ನದಿಗಿಳಿದ ಹೋರಾಟಗಾರರು ರಾಜ್ಯ ಸರ್ಕಾರ ಹಾಗೂ ಕಾವೇರಿ ಪ್ರಾಧಿಕಾರಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.
ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದ ಹೋರಾಟಗಾರರು, ರಾಜ್ಯ ಸರ್ಕಾರದ ನಡೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರು.
