Latestರಾಜ್ಯ-Karnataka

ರೇಣುಕಾಸ್ವಾಮಿ ಕೊಲೆ ಪ್ರಕರಣ : ಸಾಕ್ಷಿಗೆ ಬೆದರಿಕೆ ಆರೋಪದಲ್ಲಿ ಗೌರವ್ ಶೆಟ್ಟಿಗೆ ನಿರೀಕ್ಷಣಾ ಜಾಮೀನು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಾಕ್ಷಿದಾರರಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿದ್ದ ಪ್ರಮುಖ ಆರೋಪಿ ಗೌರವ್ ಶೆಟ್ಟಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ. 59ನೇ ಸಿಸಿಹೆಚ್ ನ್ಯಾಯಾಲಯ ಗೌರವ್ ಶೆಟ್ಟಿಗೆ ನಿರೀಕ್ಷಣಾ ಜಾಮೀನು ನೀಡಿದೆ.

ಪೊಲೀಸರ ಬಂಧನದ ಭೀತಿ ಹಿನ್ನೆಲೆಯಲ್ಲಿ ಗೌರವ್ ಶೆಟ್ಟಿ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಇದೀಗ ಜಾಮೀನು ಮಂಜೂರು ಮಾಡಿದೆ.

ಸಾಕ್ಷಿದಾರ ಸಂದೀಪ್‌ಗೆ ವಾಟ್ಸ್‌ಆ್ಯಪ್ ಕರೆ ಮೂಲಕ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಸುಹಾಸ್, ವೇಣು ಹಾಗೂ ಪುನೀತ್ ಎಂಬ ಮೂವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದರು.

ಆರೋಪಿಗಳ ವಿಚಾರಣೆ ಹಾಗೂ ಮೊಬೈಲ್ ಫೋನ್ ಪರಿಶೀಲನೆ ವೇಳೆ ಗೌರವ್ ಶೆಟ್ಟಿ ಹಾಗೂ ಕಿರಣ್ ರೆಡ್ಡಿ ಸೇರಿದಂತೆ ಕೆಲವರು ಕಾನ್ಫರೆನ್ಸ್ ಕಾಲ್ ಮೂಲಕ ಸಾಕ್ಷಿದಾರನಿಗೆ ಬೆದರಿಕೆ ಹಾಕಿರುವ ಮಾಹಿತಿ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು ಎನ್ನಲಾಗಿದೆ.

ಸಾಕ್ಷಿಗೆ ಬೆದರಿಕೆ ಹಾಕುತ್ತಿದ್ದ ಸಂದರ್ಭದಲ್ಲಿ ಗೌರವ್ ಶೆಟ್ಟಿ, ಕಿರಣ್ ಹಾಗೂ ಪುನೀತ್ ಕಾನ್ಫರೆನ್ಸ್ ಕಾಲ್‌ನಲ್ಲಿ ಇದ್ದರು ಎಂಬುದು ತನಿಖೆಯಿಂದ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ನಡುವೆ ಉಡುಪಿ ಮೂಲದ ಗೌರವ್ ಶೆಟ್ಟಿ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದರು ಎನ್ನಲಾಗಿದೆ. ಇದೀಗ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದಿರುವ ಹಿನ್ನೆಲೆಯಲ್ಲಿ ಗೌರವ್ ಶೆಟ್ಟಿ ಕಾಮಾಕ್ಷಿಪಾಳ್ಯ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.

Share with Friends
author avatar
Digital Desk