
ಕಾವೇರಿ ನೀರು ಹಂಚಿಕೆ: ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆ
ನವದೆಹಲಿ.ಸೆ.23- ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿನ ಪಾಲಿನ 70.91 ಟಿಎಂಸಿ ನೀರನ್ನು ಕರ್ನಾಟಕಕ್ಕೆ ವರ್ಗಾಯಿಸುವಂತೆ ಕೋರಿ ಕಾವೇರಿ ನದಿ ರಕ್ಷಣಾ ಸಮಿತಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ನ್ಯಾಯಮೂರ್ತಿ ವಿಕ್ರಂ ನಾಥ್ ಹಾಗೂ ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಅವರ ಪೀಠವು ಅರ್ಜಿಯನ್ನು ವಜಾಗೊಳಿಸಿದೆ.
ಪ್ರಸ್ತುತ ಜಾರಿಯಲ್ಲಿರುವ ಕಾವೇರಿ ನೀರು ಹಂಚಿಕೆ ಸೂತ್ರದಲ್ಲಿ ಲೋಪಗಳಿವೆ ಎಂದು ಸಮಿತಿ ಅರ್ಜಿಯಲ್ಲಿ ವಾದಿಸಿತ್ತು. ಕರ್ನಾಟಕದ ಕುಡಿಯುವ ನೀರು, ಕೈಗಾರಿಕೆ, ಏತ ನೀರಾವರಿ, ಎರಡನೇ ಬೆಳೆ ಹಾಗೂ ಪರಿಸರ ಸಂರಕ್ಷಣೆಗೆ ಅಗತ್ಯವಿರುವ ನೀರನ್ನು ಪರಿಗಣಿಸಬೇಕು ಎಂದು ಮನವಿ ಮಾಡಲಾಗಿತ್ತು.
ಮಳೆಯ ಪ್ರಮಾಣ ಮತ್ತು ವೈಜ್ಞಾನಿಕ ಅಂಶಗಳನ್ನು ಆಧರಿಸಿ ಸಂಕಷ್ಟದ ಸಂದರ್ಭದಲ್ಲಿ ನೀರು ಹಂಚಿಕೆ ಮಾಡುವ ಸೂತ್ರವನ್ನು ರೂಪಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಬೇಕು ಎಂದೂ ಅರ್ಜಿಯಲ್ಲಿ ಕೋರಲಾಗಿತ್ತು.
ಆದರೆ, ಕರ್ನಾಟಕ ಮತ್ತು ತಮಿಳುನಾಡಿನ ನಡುವಿನ ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬAಧಿಸಿದAತೆ ಈಗಾಗಲೇ ಕಾನೂನು ಹೋರಾಟ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ರಾಜ್ಯಗಳ ನಡುವಿನ ವಿವಾದಗಳಲ್ಲಿ ವಿವಿಧ ಸಂಘಟನೆಗಳು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸುತ್ತಾ ಹೋದರೆ
ಇಂತಹ ವ್ಯಾಜ್ಯಗಳಿಗೆ ಕೊನೆಯೇ ಇರುವುದಿಲ್ಲ ಎಂದು ಪೀಠ ಅಭಿಪ್ರಾಯಪಟ್ಟಿತು.ಈ ಹಿನ್ನೆಲೆಯಲ್ಲಿ ಸಮಿತಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತು.
