
ಜ್ಞಾನೇಶ್ ಕುಮಾರ್ ವಿರುದ್ಧ ತನಿಖೆಗೆ ಎಂಬಿಪಿ ಒತ್ತಾಯ
ವಿಜಯಪುರ.ಸೆ.29- ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಆರೋಪಗಳ ಕುರಿತು ತನಿಖೆ ನಡೆಯಬೇಕು.ಕೂಡಲೇ ಅವರನ್ನು ಹುದ್ದೆಯಿಂದ ತೆಗೆದುಹಾಕಬೇಕು.ಸುಪ್ರೀಂ ಕೋರ್ಟ್ನಲ್ಲಿ ಈ ವಿಚಾರವಾಗಿ ತನಿಖೆ ನಡೆಯಬೇಕು ಮತ್ತು ಚುನಾವಣಾ ಆಯೋಗದಲ್ಲಿ ಪ್ರಾಮಾಣಿಕ ವ್ಯಕ್ತಿಯನ್ನು ನೇಮಕ ಮಾಡಬೇಕು ಎಂದು ಸಚಿವ ಎಂ.ಬಿ. ಪಾಟೀಲ್ ಒತ್ತಾಯಿಸಿದರು.
ವಿಜಯಪುರದಲ್ಲಿ ನಡೆದ ಮಾತನಾಡಿದ ಅವರು,ಎರಡು ಕಡೆಗಳಲ್ಲಿ ಹೆಸರು ಇರುವ ಮತದಾರರನ್ನು ನಿಯಮಾನುಸಾರ ತೆಗೆದುಹಾಕುವುದಕ್ಕೆ ತಮ್ಮ ಆಕ್ಷೇಪವಿಲ್ಲ. ಆದರೆ, ಚುನಾವಣೆಯಲ್ಲಿ ಗೆಲ್ಲುವ ಉದ್ದೇಶದಿಂದ ಅರ್ಹ ಮತದಾರರ ಹೆಸರುಗಳನ್ನು ತೆಗೆದುಹಾಕುವುದು ಸರಿಯಲ್ಲ ಎಂದು ಹೇಳಿದರು.
ಚುನಾವಣಾ ಆಯೋಗವನ್ನು ದುರುಪಯೋಗಪಡಿಸಿಕೊಂಡು ಅರ್ಹ ಮತದಾರರ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಮುಂದಿನ 18 ತಿಂಗಳಲ್ಲಿ ಚುನಾವಣೆ ನಡೆಯಲಿದ್ದು,ಉತ್ತರ ಪ್ರದೇಶ, ಗುಜರಾತ್ ಸೇರಿದಂತೆ ಹಲವು ರಾಜ್ಯಗಳಲ್ಲೂ ಚುನಾವಣೆಗಳು ನಡೆಯಲಿವೆ.ಹೀಗಾಗಿ ಈ ಪ್ರಕ್ರಿಯೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹೇಳಿದರು.
ವಿಜಯಪುರದಲ್ಲಿ ಆಕ್ಷೇಪಣೆಗಳ ಕುರಿತು ಆರೋಪ:
ಬಬಲೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ 1,372 ಮತದಾರರಿಗೆ ಸಂಬAಧಿಸಿದ ಆಕ್ಷೇಪಣಾ ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ಎಂ.ಬಿ. ಪಾಟೀಲ ತಿಳಿಸಿದರು. ದೊಡ್ಡ ಪ್ರಮಾಣದಲ್ಲಿ ಮತದಾರರನ್ನು ತೆಗೆದುಹಾಕುವಂತೆ 7-8 ಮಂದಿ ಅರ್ಜಿಗಳನ್ನು ಸಲ್ಲಿಸಿದ್ದು,ಬಳಿಕ ಆ ಅರ್ಜಿಗಳನ್ನು ಹಿಂಪಡೆದಿದ್ದಾರೆ ಎಂದು ಆರೋಪಿಸಿದರು.
ವಿಜಯಪುರ ನಗರ ವಿಧಾನಸಭಾ ಕ್ಷೇತ್ರದಲ್ಲಿ ಸೆ.22ರಂದು ಸುಮಾರು 5,000 ಆಕ್ಷೇಪಣಾ ಅರ್ಜಿಗಳು ಹಾಗೂ ಸೆ.23ರಂದು ಮತ್ತೊಮ್ಮೆ ಸುಮಾರು 8,000 ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ಹೇಳಿದರು.
ಈ ಅರ್ಜಿಗಳಿಗೆ ಸಂಬಂಧಿಸಿದಂತೆ ಸಚಿನ್ ಪಡಗಾನೂರ, ಚಂದ್ರಶೇಖರ ಕವಟಗಿ, ರಾಜಶೇಖರ, ಪ್ರೇಮಾನಂದ ಬಿರಾದಾರ, ಗಿರೀಶ್ ಬಿರಾದರ್ ಹಾಗೂ ಚಂದ್ರು ಚೌಧರಿ ಅವರ ಹೆಸರುಗಳನ್ನು ಸಚಿವರು ಉಲ್ಲೇಖಿಸಿದರು.
ಈ ಬೆಳವಣಿಗೆಗಳು ಮೇಲ್ನೋಟಕ್ಕೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕುತ್ತವೆ.ಯಾರೇ ಆಗಿದ್ದರೂ ಅರ್ಹ ಮತದಾರರ ಮತದಾನದ ಹಕ್ಕನ್ನು ಕಸಿದುಕೊಳ್ಳಬಾರದು ಎಂದರು.
ಕಾರಜೋಳ ಹೇಳಿಕೆಗೆ ಪ್ರತಿಕ್ರಿಯೆ ;
ಜ್ಞಾನೇಶ್ ಕುಮಾರ್ ದಲಿತ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ಕಾಂಗ್ರೆಸ್ ಅವರನ್ನು ಗುರಿಯಾಗಿಸಿಕೊಂಡಿದೆ ಎಂಬ ಸಂಸದರಾದ ರಮೇಶ್ ಜಿಗಜಿಣಗಿ ಹಾಗೂ ಗೋವಿಂದ ಕಾರಜೋಳ ಹೇಳಿಕೆಗೆ ಪ್ರತಿಕ್ರಿಯಿಸಿದ ಪಾಟೀಲ್, ತಪ್ಪು ಮಾಡಿದರೆ ಯಾವುದೇ ಜಾತಿಯವರಾಗಿದ್ದರೂ ಪ್ರಶ್ನಿಸಬೇಕು ಎಂದರು.
ದಲಿತ ಇರಲಿ, ಲಿಂಗಾಯತ ಇರಲಿ, ತಪ್ಪು ಮಾಡುವ ಹಾಗಿಲ್ಲ.ಲಿಂಗಾಯತ ಇದ್ದಾರೆ ಎಂದರೆ ಏನು ಬೇಕಾದರೂ ಮಾಡಬಹುದಾ? ಎಂದು ಪ್ರಶ್ನಿಸಿದ ಅವರು, ಯಾವುದೇ ವಿಚಾರವನ್ನು ಜಾತಿಯೊಂದಿಗೆ ಜೋಡಿಸುವುದು ಸರಿಯಲ್ಲ ಎಂದು ಹೇಳಿದರು.
ತಮ್ಮ ಮತಕ್ಷೇತ್ರದಲ್ಲಿ 1,372 ಮತದಾರರ ಹೆಸರುಗಳ ವಿಚಾರದಿಂದ ವೈಯಕ್ತಿಕವಾಗಿ ತಮಗೆ ಯಾವುದೇ ಸಮಸ್ಯೆ ಇಲ್ಲ. ಆದರೆ ಒಬ್ಬನೇ ಒಬ್ಬ ಅರ್ಹ ಮತದಾರ ತನ್ನ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂಬುದು ತಮ್ಮ ಉದ್ದೇಶ ಎಂದು ಸ್ಪಷ್ಟಪಡಿಸಿದರು.
ಕೇಂದ್ರದ ನೆರವಿಗೆ ಪಾಟೀಲ ಆಗ್ರಹ :
ಬರ ಪರಿಸ್ಥಿತಿ ವಿಚಾರದಲ್ಲೂ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ತಾರತಮ್ಯ ಮಾಡುತ್ತಿದೆ ಎಂದು ಎಂ.ಬಿ. ಪಾಟೀಲ ಆರೋಪಿಸಿದರು.
ವಿಜಯಪುರ ಜಿಲ್ಲೆಯಲ್ಲಿ ಸದ್ಯ ಕುಡಿಯುವ ನೀರಿಗೆ ದೊಡ್ಡ ಸಮಸ್ಯೆ ಎದುರಾಗಿಲ್ಲ. ಮಹಾರಾಷ್ಟ್ರದಲ್ಲಿ ಉತ್ತಮ ಮಳೆಯಾಗಿ ಆಲಮಟ್ಟಿ ಜಲಾಶಯ ಭರ್ತಿಯಾಗಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿಲ್ಲ ಎಂದು ಹೇಳಿದರು.
ಆದರೆ ಮಳೆ ಆಧಾರಿತ ಕೃಷಿಗೆ ಭಾರಿ ಹಾನಿಯಾಗಿದೆ ಎಂದು ಹೇಳಿದ ಅವರು, ತೊಗರಿ, ಹತ್ತಿ, ಕಬ್ಬು ಸೇರಿದಂತೆ ಹಲವು ಬೆಳೆಗಳು ಹಾನಿಗೊಳಗಾಗಿವೆ.ಕೇಂದ್ರ ಸರ್ಕಾರ ತಕ್ಷಣ ರೈತರ ನೆರವಿಗೆ ಧಾವಿಸಬೇಕು ಹಾಗೂ ರೈತರ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವಧಿಯಲ್ಲಿ ರೈತರ ಸಾಲ ಮನ್ನಾ ಮಾಡಲಾಗಿತ್ತು ಎಂದು ಉಲ್ಲೇಖಿಸಿದ ಪಾಟೀಲ, ಉದ್ಯಮಿಗಳ ಸಾಲ ಮನ್ನಾ ಮಾಡಿದ ರೀತಿಯಲ್ಲೇ ರೈತರ ಸಾಲವನ್ನೂ ಪ್ರಧಾನಿ ನರೇಂದ್ರ ಮೋದಿ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.
ಆದಾಯ ತೆರಿಗೆ ಸಂಸ್ಥೆಗಳ ದುರುಪಯೋಗದ ಆರೋಪ :
ಆದಾಯ ತೆರಿಗೆ ಇಲಾಖೆ ಸೇರಿದಂತೆ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ರಾಜಕೀಯ ನಾಯಕರ ಮೇಲೆ ದಾಳಿ ನಡೆಸಲಾಗುತ್ತಿದೆ ಎಂದು ಪಾಟೀಲ್ ಆರೋಪಿಸಿದರು.
ಮಹಾರಾಷ್ಟ್ರದ ಅಜಿತ್ ಪವಾರ್ ಸೇರಿದಂತೆ ಕೆಲವರ ವಿರುದ್ಧ ಹಿಂದೆ ಭ್ರಷ್ಟಾಚಾರದ ಆರೋಪಗಳನ್ನು ಮಾಡಿದ್ದ ಬಿಜೆಪಿ, ನಂತರ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡಿದೆ.ವಾಷಿAಗ್ ಮಷಿನ್‌ನಲ್ಲಿ ಹಾಕಿ ಕ್ಲೀನ್ ಮಾಡಿ ಪಕ್ಷಕ್ಕೆ ಸೇರಿಸಿಕೊಂಡರು ಎಂದು ವ್ಯಂಗ್ಯವಾಡಿದರು.
