
ರಾಜ್ಯದಲ್ಲಿ ಎಸ್ಐ ಆರ್ ಅಕ್ರಮ ಆರೋಪ
ಬೆಂಗಳೂರು.ಅ.3-ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚಿಸುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ಈ ಸಂಬಂಧ ಮಂಗಳವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದ್ದು, ಸಂಪುಟ ಸಚಿವರ ಅಭಿಪ್ರಾಯ ಪಡೆದು ಮುಂದಿನ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಎಸ್ಐಟಿ ರಚನೆಗೆ ಸಂಬಂಧಿಸಿದ ಪ್ರಸ್ತಾವನೆ ಈಗಾಗಲೇ ಕ್ಯಾಬಿನೆಟ್ ಅಜೆಂಡಾದಲ್ಲಿ ಸೇರಿಸಲಾಗಿದೆ.
ಎಸ್ಐಆರ್ ಪ್ರಕ್ರಿಯೆಯಲ್ಲಿ ಮತದಾರರ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಲು ಪ್ರಯತ್ನಿಸಲಾಗಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಕೆಲವರು ದೂರುಗಳನ್ನು ಸಲ್ಲಿಸಿದ್ದಾರೆ. ಐದು ಖಾಸಗಿ ವ್ಯಕ್ತಿಗಳಿಂದ ದೂರುಗಳು ಬಂದಿದ್ದು, ಈ ಸಂಬಂಧ ದಾಖಲಾಗುವ ಸಾಧ್ಯತೆಯೂ ಇದೆ.
ಎಫ್ಐಆರ್ ದಾಖಲಾದ ಬಳಿಕ ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿಯನ್ನು ಪಡೆದು, ತನಿಖೆಯ ಸ್ವರೂಪ ಹಾಗೂ ಎಸ್ಐಟಿ ರಚನೆಯ ಕುರಿತು ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಈ ಕುರಿತು ಮಾಹಿತಿ ನೀಡುವಂತೆ ಕಂದಾಯ ಮತ್ತು ಗೃಹ ಇಲಾಖೆಗೆ ಸೂಚನೆ ನೀಡಲಾಗಿದೆ.
ಎಸ್ಐಟಿ ರಚಿಸಿದಲ್ಲಿ ಹಿರಿಯ ಪೊಲೀಸ್ ಅಧಿಕಾರಿಯ ನೇತೃತ್ವದಲ್ಲಿ ತನಿಖೆ ನಡೆಸುವ ಸಾಧ್ಯತೆಯಿದ್ದು, ಎಡಿಜಿಪಿ ಮಟ್ಟದ ಅಧಿಕಾರಿಯನ್ನು ನೇಮಿಸುವ ಬಗ್ಗೆಯೂ ಚರ್ಚೆ ನಡೆದಿದೆ ಎಂದು ಮೂಲಗಳು ಹೇಳಿವೆ.
ಈ ನಡುವೆ, ಅಳಂದ ಪ್ರಕರಣಕ್ಕೆ ಸಂಬಂಧಿಸಿದ ತನಿಖಾ ಪ್ರಗತಿಯ ಬಗ್ಗೆಯೂ ಮುಖ್ಯಮಂತ್ರಿ ಮಾಹಿತಿ ಪಡೆದುಕೊಂಡಿದ್ದಾರೆ. ಎಸ್ಐಆರ್ಗೆ ಸಂಬಂಧಿಸಿದ ದೂರುಗಳು ಹಾಗೂ ಈಗಾಗಲೇ ನಡೆದಿರುವ ತನಿಖೆಗಳ ಮಾಹಿತಿಯನ್ನು ಪರಿಶೀಲಿಸಿದ ಬಳಿಕ ಸರ್ಕಾರ ಮುಂದಿನ ಹೆಜ್ಜೆ ಇಡುವ ಸಾಧ್ಯತೆ ಇದೆ.
