
ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿ ಎದುರು ಬೆಂಕಿ ಅವಘಡ
ಬೆಂಗಳೂರು.ಅ.10- ನಗರದ ಇನ್ಫೆಂಟ್ರಿ ರಸ್ತೆಯಲ್ಲಿರುವ ಪೊಲೀಸ್ ಕಮಿಷನರ್ ಕಚೇರಿ ಮುಂಭಾಗದಲ್ಲಿ ಚಲಿಸುತ್ತಿದ್ದ ಟೊಯೊಟಾ ಟೈಸರ್ ಕಾರಿನ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.
ಕಾರಿನ ಇಂಜಿನ್ ಭಾಗದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಕಾರಿನಲ್ಲಿ ಮಾಲೀಕ ಶಬ್ಬೀರ್ ಒಬ್ಬರೇ ಪ್ರಯಾಣಿಸುತ್ತಿದ್ದು, ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ತಕ್ಷಣ ಕಾರಿನಿಂದ ಕೆಳಗಿಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು, ಸಂಚಾರ ಪೊಲೀಸರು ಹಾಗೂ ಸ್ಪರ್ಶ್ ಆಸ್ಪತ್ರೆಯ ಸಿಬ್ಬಂದಿ ಕೂಡಲೇ ಬೆಂಕಿ ನಂದಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ತ್ವರಿತ ಕಾರ್ಯಾಚರಣೆಯಿಂದ ಬೆಂಕಿಯನ್ನು ನಂದಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಜೀವಾಪಾಯ ಸಂಭವಿಸಿಲ್ಲ.
ಆದರೆ, ಬೆಂಕಿಯ ತೀವ್ರತೆಗೆ ಕಾರಿನ ಇಂಜಿನ್ ಭಾಗ ಸುಟ್ಟು ಕರಕಲಾಗಿದೆ. ಜನನಿಬಿಡ ರಸ್ತೆಯಲ್ಲೇ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
