100 ದಿನಗಳ ಜನಪರ ಆಡಳಿತ: ‘ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ಚಾಲನೆ

ಬೆಂಗಳೂರು: ರಾಜ್ಯ ಸರ್ಕಾರದ ಜನಪರ ಆಡಳಿತ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ‘ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಸಮಗ್ರ ಅಭಿವೃದ್ಧಿ, ಸಾರ್ವಜನಿಕ ಕಲ್ಯಾಣ ಹಾಗೂ ಉತ್ತಮ ಆಡಳಿತದ ಸಂಕೇತವಾಗಿ ದೀಪ ಬೆಳಗಿಸಲಾಯಿತು. ಕಾರ್ಯಕ್ರಮದಲ್ಲಿ ರೈತರು, ವಿದ್ಯಾರ್ಥಿಗಳು, ಪೌರಕಾರ್ಮಿಕರು, ಆಶಾ ಕಾರ್ಯಕರ್ತೆಯರು ಹಾಗೂ ಮಹಿಳೆಯರು ಸೇರಿದಂತೆ ವಿವಿಧ ವರ್ಗಗಳ ಪ್ರತಿನಿಧಿಗಳು ನಾಯಕರೊಂದಿಗೆ ದೀಪ ಬೆಳಗಿಸುವಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ರಾಜ್ಯ ಸಚಿವ ಸಂಪುಟದ ಎಲ್ಲಾ ಸಚಿವರು ಉಪಸ್ಥಿತರಿದ್ದರು.
ಸರ್ಕಾರ ಅಧಿಕಾರಕ್ಕೆ ಬಂದು 100 ದಿನಗಳ ಅವಧಿಯಲ್ಲಿ ಕೈಗೊಂಡಿರುವ ವಿವಿಧ ಜನಪರ ಕಾರ್ಯಕ್ರಮಗಳು, ಯೋಜನೆಗಳು ಹಾಗೂ ಸಾಧನೆಗಳನ್ನು ಒಳಗೊಂಡ ಪುಸ್ತಕವನ್ನು ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು. ಸರ್ಕಾರದ 100 ದಿನಗಳ ಆಡಳಿತದಲ್ಲಿ ಜನರ ಆಶಯಗಳಿಗೆ ಸ್ಪಂದಿಸುವ ಹಾಗೂ ರಾಜ್ಯದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡುವ ಪ್ರಯತ್ನ ಮಾಡಲಾಗಿದೆ ಎಂದು ನಾಯಕರು ತಿಳಿಸಿದರು.
‘ನುಡಿದಂತೆ ನಡೆದ’ 100 ದಿನಗಳ ಆಡಳಿತವನ್ನು ರಾಜ್ಯದ ಜನತೆಗೆ ಸಮರ್ಪಿಸಲಾಗುತ್ತಿದೆ ಎಂಬ ಸಂದೇಶವನ್ನು ಕಾರ್ಯಕ್ರಮದ ಮೂಲಕ ಸಾರಲಾಯಿತು. ಮುಂದಿನ ದಿನಗಳಲ್ಲಿಯೂ ಜನರ ಸಹಕಾರದೊಂದಿಗೆ ಕರ್ನಾಟಕದ ಸಮಗ್ರ ಪ್ರಗತಿಯತ್ತ ಸರ್ಕಾರ ಮುನ್ನಡೆಯಲಿದೆ ಎಂಬ ಸಂಕಲ್ಪವನ್ನು ವ್ಯಕ್ತಪಡಿಸಲಾಯಿತು.
