
‘ಟಾಕ್ಸಿಕ್’ ಚಿತ್ರ ರಿಲೀಸ್ ಹಿನ್ನೆಲೆಯಲ್ಲಿ ಧರ್ಮಸ್ಥಳಕ್ಕೆ ನಟ ಯಶ್ ಭೇಟಿ, ವಿಶೇಷ ಪೂಜೆ
ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ ರಾಕಿಂಗ್ ಸ್ಟಾರ್ ಯಶ್ ಕರಾವಳಿಯ ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡಿದ್ದಾರೆ.
ಯಶ್ ಇಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆರಳಿದರು. ಅಲ್ಲಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದರು. ನಂತರ ಸಮೀಪದ ಖ್ಯಾತ ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೂ ಭೇಟಿ ನೀಡಿದ ಯಶ್, ಮಣ್ಣಿನ ಹರಕೆ ಅರ್ಪಿಸಿ ದೇವರ ಆಶೀರ್ವಾದ ಪಡೆದರು.
ತಮ್ಮ ಪ್ರತಿಯೊಂದು ಸಿನಿಮಾ ಬಿಡುಗಡೆಯ ಮುನ್ನ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆಯುವ ಸಂಪ್ರದಾಯವನ್ನು ಯಶ್ ಹಲವು ವರ್ಷಗಳಿಂದ ಪಾಲಿಸಿಕೊಂಡು ಬರುತ್ತಿದ್ದಾರೆ. ಇದೀಗ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೂ ಮುನ್ನವೂ ಅದೇ ಸಂಪ್ರದಾಯವನ್ನು ಮುಂದುವರಿಸಿದ್ದಾರೆ.
