
ರಾಹುಲ್ ಬಗ್ಗೆ ಹೇಳಿಕೆ : ಬಿಜೆಪಿ ಶಾಸಕನ ವಿರುದ್ಧ ಎಫ್ ಐಆರ್
ಉಡುಪಿ, ಜುಲೈ 29: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದ್ವೇಷ ಭಾಷಣ ಮಾಡಿರುವ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿಜೆಪಿ ಪ್ರತಿಭಟನಾ ಸಭೆಯಲ್ಲಿ ಕಾಂಗ್ರೆಸ್ ನಾಯಕ, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹಾಗೂ ದ್ವೇಷ ಭಾಷಣ ಮಾಡಿದ್ದಾರೆ ಎಂಬ ಆರೋಪದಡಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ನಗರ ಪೊಲೀಸ್ ಠಾಣೆಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ನೇತೃತ್ವದಲ್ಲಿ ತೆರಳಿದ ಕಾಂಗ್ರೆಸ್ ಮುಖಂಡರು ನಗರ ಠಾಣೆಯ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ಗೆ ದೂರು ಸಲ್ಲಿಸಿದರು.
ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ನೀಡಿದ ದೂರಿನಂತೆ ಶಾಸಕ ಯಶ್ಪಾಲ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 57, 192, 196(2), 352, 353(2) ಮತ್ತು 351(2) ಅಡಿಯಲ್ಲಿ ಎಫ್ಐಆರ್ ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಜುಲೈ 28ರಂದು ಉಡುಪಿಯ ಜೋಡುಕಟ್ಟೆ ಸಮೀಪ ನಡೆದ ಬಿಜೆಪಿ ಪ್ರತಿಭಟನಾ ಸಭೆಯಲ್ಲಿ ಯಶಪಾಲ್ ಸುವರ್ಣ ಬಾಬರಿ ಮಸೀದಿಯಂತೆ ರಾಹುಲ್ ಗಾಂಧಿ ವಂಶವನ್ನು ಧ್ವಂಸ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಅಲ್ಲದೆ, ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದರು.
ಹೀಗಾಗಿ ಯಶಪಾಲ್ ಸುವರ್ಣ ತಮ್ಮ ಭಾಷಣದಲ್ಲಿ ಬಾಬ್ರಿ ಮಸೀದಿ ಧ್ವಂಸದ ವಿಚಾರವನ್ನು ಪ್ರಸ್ತಾಪಿಸಿ ದ್ವೇಷವನ್ನು ಪ್ರಚೋದಿಸುವ ರೀತಿಯಲ್ಲಿ ಮಾತನಾಡಿದ್ದಾರೆ ಎಂಬ ಆರೋಪವೂ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಅದೇ ಭಾಷಣದಲ್ಲಿ ನೀಟ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳ ಬಗ್ಗೆಯೂ ಅವಾಚ್ಯ ಪದಗಳನ್ನು ಬಳಸಿದ್ದಾರೆ ಹಾಗೂ ವಿವಿಧ ಸಮುದಾಯಗಳ ನಡುವೆ ದ್ವೇಷ ಮತ್ತು ಉದ್ವಿಗ್ನತೆ ಉಂಟುಮಾಡುವ ರೀತಿಯ ಭಾಷಣ ಮಾಡಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.
