LatestTop Storiesರಾಜಕೀಯ | Politicsರಾಜ್ಯ-Karnataka

ಬಿಡದಿ ಕದನಕ್ಕೆ ದೊಡ್ಡಗೌಡರ ಎಂಟ್ರಿ

ಬೆಂಗಳೂರು,ಜು. 14 : ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಅನುಷ್ಠಾನಗೊಳಿಸಲು ಉದ್ದೇಶಿಸಿರುವ ಗ್ರೇಟರ್ ಬೆಂಗಳೂರು ಬಿಡದಿ ಸಮಗ್ರ ಉಪನಗರ ಯೋಜನೆ’ಯನ್ನು ತಕ್ಷಣವೇ ಕೈಬಿಡಬೇಕೆಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಸಿಎಂ ಡಿ.ಕೆ.ಶಿವಕುಮಾರ್‌ ಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಜನೆಗಾಗಿ ರಾಮನಗರ ಮತ್ತು ಹಾರೋಹಳ್ಳಿ ತಾಲೂಕಿನ ಒಟ್ಟು 9 ಹಳ್ಳಿಗಳ ರೈತರ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುತ್ತಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಅವರು, ರೈತರ ಹಿತದೃಷ್ಟಿಯಿಂದ ಈ ನಿರ್ಧಾರದಿಂದ ಹಿಂದೆ ಸರಿಯುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆಗಾಗಿ ರಾಮನಗರ ತಾಲೂಕಿನ ಬಿಡದಿ ಹೋಬಳಿಯ ಬೈರಮಂಗಲ, ಬನಗಿರಿ, ಹೊಸೂರು, ಕೆ.ಜಿ.ಗೊಲ್ಲರಪಾಳ್ಯ, ಕಂಚುಗಾರನಹಳ್ಳಿ, ಅರಳಾಳುಸಂದ್ರ, ಕೆಂಪಯ್ಯನಪಾಳ್ಯ, ಮಂಡಲಹಳ್ಳಿ ಹಾಗೂ ಹಾರೋಹಳ್ಳಿ ತಾಲೂಕಿನ ವಡೇರಹಳ್ಳಿ (ಭಾಗಶಃ) ಗ್ರಾಮಗಳ ಒಟ್ಟು 7,481 ಎಕರೆ 21.08 ಗುಂಟೆ ಕೃಷಿ ಜಮೀನನ್ನು ವಶಪಡಿಸಿಕೊಳ್ಳಲು ಸರ್ಕಾರ ಮುಂದಾಗಿದೆ. 18,133 ಕೋಟಿ ರೂ.ಗಳ ಅಂದಾಜು ವೆಚ್ಚದ ಈ ಯೋಜನೆಗೆ ಈಗಾಗಲೇ ನಗರಾಭಿವೃದ್ಧಿ ಪ್ರಾಧಿಕಾರಗಳ ಕಾಯ್ದೆಯಡಿ ಅನುಮೋದನೆ ನೀಡಲಾಗಿದ್ದು, ಇದನ್ನು ವಿರೋಧಿಸಿ ಸ್ಥಳೀಯ ರೈತರು ನಿರಂತರ ಹೋರಾಟ ನಡೆಸುತ್ತಿದ್ದಾರೆ ಎಂದು ದೇವೇಗೌಡರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಬೆಂಗಳೂರು ನಗರ ನಿವಾಸಿಗಳಿಗೆ ವಸತಿ ಕಲ್ಪಿಸುವ ಹೆಸರಿನಲ್ಲಿ ಈ ಯೋಜನೆ ಮಾಡಲಾಗುತ್ತಿದೆ. ಆದರೆ, ಈಗಾಗಲೇ ಸರ್ಕಾರ ಅಭಿವೃದ್ಧಿಪಡಿಸಿರುವ ಡಾ. ಶಿವರಾಮ ಕಾರಂತ ಲೇಔಟ್ ಹಾಗೂ ನಾಡಪ್ರಭು ಕೆಂಪೇಗೌಡ ಲೇಔಟ್‌ಗಳಲ್ಲಿ ಸಾವಿರಾರು ನಿವೇಶನಗಳು ಹಂಚಿಕೆಯಾಗದೆ ಖಾಲಿ ಬಿದ್ದಿವೆ.

ಇದರ ಜೊತೆಗೆ ಬೆಂಗಳೂರು ಬ್ಯುಸಿನೆಸ್ ಕಾರಿಡಾರ್-2 (ಪಿಆರ್ ಆರ್-2) ಗೆ ಹೊಂದಿಕೊಂಡಂತೆ ಇನ್ನೂ ೬ ಹೊಸ ಬಡಾವಣೆಗಳನ್ನು ರಚಿಸಲಾಗುತ್ತಿದೆ. ಪರಿಸ್ಥಿತಿ ಹೀಗಿರುವಾಗ ಮತ್ತೊಂದು ಉಪನಗರದ ಹೆಸರಿನಲ್ಲಿ ರೈತರ ಕೃಷಿ ಭೂಮಿಯನ್ನು ಕಿತ್ತುಕೊಳ್ಳುವುದು ನ್ಯಾಯವಲ್ಲ ಎಂದು ಮಾಜಿ ಪ್ರಧಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ಬಿಡದಿ ಮತ್ತು ಹಾರೋಹಳ್ಳಿಯಲ್ಲಿ ಸಾವಿರಾರು ಎಕರೆ ಕೃಷಿ ಭೂಮಿಯನ್ನು ಕೆಐಎಡಿಬಿ ಮೂಲಕ ವಶಪಡಿಸಿಕೊಂಡು ಕೈಗಾರಿಕೆಗಳಿಗೆ ನೀಡಲಾಗಿದೆ. ಈಗ ಮತ್ತೆ ಬೃಹತ್ ಪ್ರಮಾಣದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡರೆ ಸ್ಥಳೀಯ ರೈತರು ಬೀದಿಪಾಲಾಗಲಿದ್ದಾರೆ. ಆದ್ದರಿಂದ ಸಾರ್ವಜನಿಕರು ಹಾಗೂ ರೈತರ ಹಿತದೃಷ್ಟಿಯಿಂದ ಬಿಡದಿ ಉಪನಗರ ಯೋಜನೆಯನ್ನು ತಕ್ಷಣವೇ ಕೈಬಿಡಬೇಕು ಎಂದು ಹೆಚ್.ಡಿ. ದೇವೇಗೌಡರು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ.

Share with Friends
author avatar
Digital Desk