
ಚಿಕ್ಕಮಗಳೂರಿನಲ್ಲಿ ಗುಂಡು ಹಾರಿಸಿಕೊಂಡು ಉದ್ಯಮಿ ಪತ್ನಿ ಆತ್ಮಹತ್ಯೆ
ಚಿಕ್ಕಮಗಳೂರು, ಜೂ.11: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಉದ್ಯಮಿಯೊಬ್ಬರ ಪತ್ನಿ ರಿವಾಲ್ವರ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಲೇನಹಳ್ಳಿ ಬಡಾವಣೆಯಲ್ಲಿ ನಡೆದಿದೆ.
ಸುಮ (55) ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎಂದು ಗುರುತಿಸಲಾಗಿದೆ. ಅವರು ಉದ್ಯಮಿ ರಾಜೇಶ್ ಅವರ ಪತ್ನಿಯಾಗಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ, ನಿನ್ನೆ ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಸುಮ ಅವರು ತಮ್ಮ ಬಳಿ ಇದ್ದ ರಿವಾಲ್ವರ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಶ್ರೀಮಂತ ಕುಟುಂಬದ ಗೃಹಿಣಿಯ ದಿಢೀರ್ ಸಾವಿನ ಸುದ್ದಿ ಕುಟುಂಬಸ್ಥರು ಹಾಗೂ ಸಾರ್ವಜನಿಕರಲ್ಲಿ ತೀವ್ರ ಆಘಾತ ಮೂಡಿಸಿದೆ.
ಘಟನಾ ಸ್ಥಳದಲ್ಲಿ ಸುಮ ಅವರು ಬರೆದಿದ್ದಾರೆನ್ನಲಾದ ಡೆತ್ನೋಟ್ ಪತ್ತೆಯಾಗಿದ್ದು, ಸಾವಿನ ಹಿಂದಿನ ನಿಖರ ಕಾರಣ ತಿಳಿಯಲು ಅದು ಪ್ರಮುಖ ಸಾಕ್ಷ್ಯವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಬಸವನಹಳ್ಳಿ ಠಾಣೆ ಪೊಲೀಸರು, ಸೋಕೋ ತಂಡ ಹಾಗೂ ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಿವಾಲ್ವರ್, ಡೆತ್ನೋಟ್ ಸೇರಿದಂತೆ ಪ್ರಮುಖ ಸಾಕ್ಷ್ಯಾಧಾರಗಳನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ.
ಈ ಸಂಬಂಧ ಮೃತರ ಪುತ್ರ ಬಸವನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರಕುಮಾರ್ ದಯಾಮ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೇಲ್ನೋಟಕ್ಕೆ ಇದು ಪಿಸ್ತೂಲಿನಿಂದ ಮಾಡಿಕೊಂಡ ಆತ್ಮಹತ್ಯೆಯಂತೆ ಕಂಡುಬರುತ್ತಿದೆ.
ಆದರೆ, ತನಿಖೆ ಪೂರ್ಣಗೊಂಡ ಬಳಿಕವೇ ಸಾವಿನ ಹಿಂದಿನ ನಿಖರ ಕಾರಣ ಹಾಗೂ ಸತ್ಯಾಂಶ ಹೊರಬರಲಿದೆ ಎಂದು ಅವರು ತಿಳಿಸಿದ್ದಾರೆ. ಪ್ರಸ್ತುತ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
