BlogLatestTop Storiesರಾಜಕೀಯ | Politics

ಚನ್ನಪಟ್ಟಣ ಕದನ : ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಯೋಗೇಶ್ವರ್ ರಾಜೀನಾಮೆ, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ

ಹುಬ್ಬಳ್ಳಿ : ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ತೀವ್ರ ರಂಗೇರುತ್ತಿದ್ದು, ಬಿಜೆಪಿ ವಿಧಾನ ಪರಿಷತ್ ಸದಸ್ಯ ಹಾಗೂ ಚನ್ನಪಟ್ಟಣ ಟಿಕೆಟ್ ಆಕಾಂಕ್ಷಿಯಾಗಿದ್ದ ಸಿಪಿ ಯೋಗೇಶ್ವರ್ ಅವರು ಸೋಮವಾರ ತಮ್ಮ MLC ಸ್ಥಾನಕ್ಕೆ ಯೋಗೇಶ್ವರ್ ರಾಜೀನಾಮೆ ನೀಡಿದ್ದಾರೆ.

ಇಂದು ಸಂಜೆ ಹುಬ್ಬಳ್ಳಿಗೆ ತೆರಳಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ, ನನ್ನ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಒಂದು ಸಾಲಿನ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.

ರಾಜೀನಾಮೆ ಬಳಿಕ ಹೊರಟ್ಟ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಪಿ ಯೋಗೇಶ್ವರ್, ನಾನು ಚುನಾವಣೆಗೆ ಸ್ಪರ್ಧಿಸಬೇಕಾದರೆ, MLC ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಗುತ್ತದೆ. ಆದ್ದರಿಂದ ರಾಜೀನಾಮೆ ಕೊಟ್ಟಿದ್ದೀನಿ. ನಾನು ಯಾವುದೇ ಪಕ್ಷ ಸೇರುವುದಿಲ್ಲ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಹೇಳಿದರು.

ಚನ್ನಪಟ್ಟಣ ಉಪಕದನ ಕ್ಷಣ ಕ್ಷಣಕ್ಕೂ ರಂಗೇರುತ್ತಿದೆ. ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಯೋಗೇಶ್ವರ್ ರಾಜೀನಾಮೆ ನಡೆ ಬೆನ್ನಲ್ಲೇ ಕಾಂಗ್ರೆಸ್ ಹೈ ಅಲರ್ಟ್ ಆಗಿದ್ದು ತೆರೆಮರೆ ಮಾತುಕತೆ ಪ್ರಯತ್ನ ನಡೆಸುತ್ತಿದೆ.

ಇತ್ತ ಚನ್ನಪಟ್ಟಣ ಹೆಚ್‌ಡಿ ಕುಮಾರಸ್ವಾಮಿ ಅವರ ಸ್ವಕ್ಷೇತ್ರ, ಈ ಕ್ಷೇತ್ರವನ್ನು ಶತಾಯಗತಾಯ ಉಳಿಸಿಕೊಳ್ಳಲೇಬೇಕೆಂದು ನಿರ್ಧರಿಸಿರುವ ಹೆಚ್‌ಡಿ ಕುಮಾರಸ್ವಾಮಿ ಅವರು ಸಭೆ ಮೇಲೆ ಸಭೆ ನಡೆಸುತ್ತಿದ್ದಾರೆ. ಅದರಲ್ಲೂ ಮುಖ್ಯವಾಗಿ ಈಗಾಗಲೇ 2 ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಅನುಭವಿಸಿರುವ ಪುತ್ರ ನಿಖಿಲ್ ಕುಮಾರಸ್ವಾಮಿಯವರಿಗೆ ಈ ಕ್ಷೇತ್ರದಲ್ಲಿ ರಾಜಕೀಯ ನೆಲೆ ಕಲ್ಪಿಸಲು ಕುಮಾರಸ್ವಾಮಿ ಅವರು ನಿರ್ಧರಿಸಿದ್ದಾರೆ.

ಸಿಪಿ ಯೋಗೇಶ್ವರ್ ಅವರು ಬಿಜೆಪಿಯ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಲು ಹುಬ್ಬಳ್ಳಿಗೆ ತೆರಳುತ್ತಿದ್ದಂತೆ ಬಸವರಾಜ್ ಹೊರಟ್ಟಿಗೆ ದೇವೇಗೌಡ್ರು ಕರೆ ಮಾಡಿ ರಾಜೀನಾಮೆ ವಿಚಾರವನ್ನು ಕನ್ಫರ್ಮ್ ಮಾಡಿಕೊಂಡು ಮೊಮ್ಮಗ ನಿಖಿಲ್ ಕುಮಾರಸ್ವಾಮಿಗೆ ಬುಲಾವ್ ನೀಡಿದ್ದಾರೆ ಎನ್ನಲಾಗಿದೆ.

ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ಅವರು, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರಿಗೆ ಕರೆ ಮಾಡಿ ಬರಹೇಳಿದ್ದಾರೆ. ಇದೀಗ ಕರೆ ಬೆನ್ನೆಲ್ಲೆ ನಿಖಿಲ್ ಕುಮಾರಸ್ವಾಮಿ ಪದ್ಮನಾಭ‌ನಗರದ ನಿವಾಸಕ್ಕೆ ತೆರಳಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

Share with Friends
author avatar
News Desk