BlogLatestರಾಜ್ಯ-Karnataka

ನಾಗಮಂಗಲ ಗಲಭೆ ಆರೋಪಿಗಳು ಯಾವುದೇ ಧರ್ಮದವರಾದರೂ ನಿರ್ದಾಕ್ಷಿಣ್ಯ ಕ್ರಮ । ಸಿಎಂ

ಬೆಂಗಳೂರು: ನಾಗಮಂಗಲ ಗಲಭೆ ಕೇಸ್ ಗೆ ಸಂಬಂಧಿಸಿದಂತೆ ಆರೋಪಿಗಳು ಯಾವುದೇ ಧರ್ಮದವರಾಗಿರಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. ಮುಸ್ಲೀಂ, ಹಿಂದೂ ಯಾರೇ ಆಗಿದ್ದರೂ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ , ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ನಡೆದಿರುವ ಕಲ್ಲುತೂರಾಟವು ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆತರುವ ಕಿಡಿಗೇಡಿಗಳ ದುಷ್ಕೃತ್ಯ ಎನ್ನುವುದು ನಿಸ್ಸಂಶಯ. ಜೊತೆಗೆ ಈ ಘಟನೆಯನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಈಗಾಗಲೇ 50ಕ್ಕೂ ಅಧಿಕ ಜನರನ್ನು ಬಂಧಿಸಲಾಗಿದ್ದು, ಸಮಾಜದ ಶಾಂತಿ, ಸುವ್ಯವಸ್ಥೆ ಕಾಪಾಡುವುದೇ ನಮ್ಮ ಮೊದಲ ಆದ್ಯತೆಯಾಗಿದೆ.

ಕಳೆದ ಒಂದೂವರೆ ವರ್ಷಗಳಿಂದ ಯಾವುದೇ ಗಲಭೆ, ಗಲಾಟೆ, ಹಿಂಸಾಚಾರಗಳು ನಡೆಯದೆ ಸರ್ವಜನಾಂಗದ ಶಾಂತಿಯ ತೋಟದಂತಿದ್ದ ನಾಡನ್ನು, ಧಾರ್ಮಿಕ ನೆಲೆಗಟ್ಟಿನಲ್ಲಿ ವಿಭಜಿಸಲು ಯತ್ನಿಸುವ ದುರುಳರು ಯಾವುದೇ ಜಾತಿ, ಧರ್ಮದವರಾಗಿರಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಪ್ರಚೋದನೆಗಳಿಗೆ ಒಳಗಾಗದೆ ಶಾಂತಿ, ಸಂಯಮ ಕಾಪಾಡಿಕೊಳ್ಳುವ ಮೂಲಕ ನಮ್ಮೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

Share with Friends
author avatar
News Desk