
ಸತೀಶ್ ಜಾರಕಿಹೊಳಿ ಮೇಲಿನ ED ದಾಳಿ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ಬೆಳಗಾವಿ: ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲಿನ ಜಾರಿ ನಿರ್ದೇಶನಾಲಯದ ED ದಾಳಿ ಖಂಡಿಸಿ ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭರ್ಜರಿ ಪ್ರತಿಭಟನೆ ನಡೆಸಿದರು.
ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಕಾಂಗ್ರೆಸ್ ಜಿಲ್ಲಾ ಹಾಗೂ ನಗರ ಘಟಕದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಈ ವೇಳೆ ಟೈರ್ಗೆ ಬೆಂಕಿ ಹಚ್ಚಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಸತೀಶ್ ಜಾರಕಿಹೊಳಿ ಅವರನ್ನು ರಾಜಕೀಯವಾಗಿ ಟಾರ್ಗೆಟ್ ಮಾಡಿ ED ದಾಳಿ ನಡೆಸಲಾಗಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಅವರು ಅಹಿಂದ ಪರ ಧ್ವನಿ ಎತ್ತುತ್ತಿರುವ ನಾಯಕರಾಗಿದ್ದು, ಅವರ ರಾಜಕೀಯ ಬೆಳವಣಿಗೆಯನ್ನು ಸಹಿಸದೆ ಷಡ್ಯಂತ್ರ ನಡೆಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇನ್ನು ಐಟಿ ಮತ್ತು EDಯಂತಹ ತನಿಖಾ ಸಂಸ್ಥೆಗಳನ್ನು ಕೇಂದ್ರ ಬಿಜೆಪಿ ಸರ್ಕಾರ ರಾಜಕೀಯವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ರಾಜಾ ಸಲೀಂ, ಬಸವರಾಜ್ ಶಿಗ್ಗಾವಿ, ವಿನಯ್ ನಾವಲಗಟ್ಟಿ, ರಾಜು ಮೋದಗಿ, ಚಂದ್ರು ಕುಂದರಗಿ ಸೇರಿದಂತೆ ಬೆಳಗಾವಿ-ಚಿಕ್ಕೋಡಿ ಭಾಗದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.
