LatestTop Storiesಜಿಲ್ಲಾ ಸುದ್ದಿಗಳು | District Newsವಿಜಯಪುರ-Vijayapura

ಇಂಡಿಗೆ ಬರ ಘೋಷಿಸಿ..! ರೈತರ ಆಕ್ರೋಶ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕನ್ನು ಬರಪೀಡಿತ ಪ್ರದೇಶಗಳ ಪಟ್ಟಿಯಿಂದ ಕೈಬಿಟ್ಟಿರುವ ಸರ್ಕಾರದ ಕ್ರಮವನ್ನು ಖಂಡಿಸಿ, ಜೆಡಿಎಸ್ ಮುಖಂಡರಾದ ಬಿ.ಡಿ. ಪಾಟೀಲರ ನೇತೃತ್ವದಲ್ಲಿ ಪಕ್ಷಾತೀತವಾಗಿ ರೈತಪರ ಹಾಗೂ ಕನ್ನಡಪರ ಸಂಘಟನೆಗಳ ಮುಖಂಡರು ಮತ್ತು ಸಾವಿರಾರು ರೈತರು ಝಳಕಿ ರಾಷ್ಟ್ರೀಯ ಹೆದ್ದಾರಿ ಬಳಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಝಳಕಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ಸೇತುವೆ ಬಳಿ ನಡೆದ ಪ್ರತಿಭಟನೆಯಲ್ಲಿ ರೈತರು ಎತ್ತಿನ ಗಾಡಿಗಳೊಂದಿಗೆ ಭಾಗವಹಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಇಂಡಿಗೆ ಬರ ಘೋಷಿಸಿ ರೈತರ ಆಕ್ರೋಶ

ಈ ಸಂದರ್ಭದಲ್ಲಿ ಮಾಜಿ ಶಾಸಕ ರವಿಕಾಂತ ಪಾಟೀಲ, ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಜೆಡಿಎಸ್ ಮುಖಂಡ ಬಿ.ಡಿ. ಪಾಟೀಲ ಹಾಗೂ ಬಿಜೆಪಿ ಮುಖಂಡ ಕಾಸುಗೌಡ ಬಿರಾದಾರ ಮಾತನಾಡಿ, ಇಂಡಿ ತಾಲೂಕಿನಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದರೂ ತಾಲೂಕನ್ನು ಬರಪೀಡಿತ ಪಟ್ಟಿಯಿಂದ ಕೈಬಿಟ್ಟಿರುವುದು ರೈತರಿಗೆ ಮಾಡಿರುವ ಅನ್ಯಾಯವಾಗಿದೆ ಎಂದು ಖಂಡಿಸಿದರು.

ರೈತರು ಸಂಕಷ್ಟದಲ್ಲಿರುವ ಹಿನ್ನೆಲೆಯಲ್ಲಿ ಸರ್ಕಾರ ಕೂಡಲೇ ಇಂಡಿ ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರ್ಪಡೆಗೊಳಿಸಬೇಕು. ರೈತರ ಸಾಲಮನ್ನಾ ಘೋಷಿಸಬೇಕು, ಪ್ರತಿ ಎಕರೆಗೆ 25 ಸಾವಿರೂಪಾಯಿ ಪರಿಹಾರ ನೀಡಬೇಕು.

ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಗೋಶಾಲೆಗಳನ್ನು ಆರಂಭಿಸಬೇಕು ಹಾಗೂ ರೈತರಿಗೆ ಬರಬೇಕಾದ ಬೆಳೆ ವಿಮೆ ಹಣವನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

ರೈತರ ಸಮಸ್ಯೆಗಳನ್ನು ನಿರ್ಲಕ್ಷಿಸಿದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು ಎಂದು ಪ್ರತಿಭಟನಾಕಾರರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಶೀಲವಂತ ಉಮರಾಣಿ, ಎಂ.ಎಂ.ಎಸ್. ಪಾಟೀಲ, ಮರೇಪ್ಪ ಗಿರಣಿವಡ್ಡರ, ರಾಘವೇಂದ್ರ ಕಾಪಸೆ, ರವಿ ವಗ್ಗೆ, ಅಯೂಬ್ ನಾಟೀಕರ, ಬಾಳು ಮುಳಜಿ, ಗುರುನಾಥ ಬಗಲಿ, ವಿಜಯಕುಮಾರ ಭೋಸಲೆ, ನಾಗನಾಥ ಬಿರಾದಾರ ಸೇರಿದಂತೆ ಹಲವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.ನಂತರ ಉಪ ತಹಶೀಲ್ದಾರ್ ಆನಂದ ಫಮಾರ ರವರಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ರೈತ ಮುಖಂಡರು ಮತ್ತು ಕನ್ನಡ ಪರ ಸಂಘಟನೆಗಳು ಮುಂತಾದವರು ಉಪಸ್ಥಿತರಿದ್ದರು.

Share with Friends
author avatar
Digital Desk