ಕಲಬುರಗಿ-Kalaburagiಜಿಲ್ಲಾ ಸುದ್ದಿಗಳು | District News

ಕಲಬುರಗಿ ಸೆಂಟ್ರಲ್ ಜೈಲಿಗೆ ಡಿಜಿಪಿ ಅಲೋಕ್ ಕುಮಾರ್ ಭೇಟಿ

ಕಲಬುರಗಿ: ಇತ್ತೀಚೆಗೆ ಮೂವರು ಕೈದಿಗಳು ಪರಾರಿಯಾಗಿದ್ದ ಕಲಬುರಗಿ ಕೇಂದ್ರ ಕಾರಾಗೃಹಕ್ಕೆ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಅಲೋಕ್ ಕುಮಾರ್ ಭೇಟಿ ನೀಡಿ ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸಿದರು.

ಜೈಲಿಗೆ ಭೇಟಿ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಜಿಪಿ ಅಲೋಕ್ ಕುಮಾರ್, ಮೂರು ಕೈದಿಗಳು ಜೈಲಿನಿಂದ ಪರಾರಿಯಾದ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದರು.

ಈಗಾಗಲೇ ಪರಾರಿಯಾಗಿದ್ದ ಇಬ್ಬರು ಕೈದಿಗಳನ್ನು ಪೊಲೀಸರು ಬಂಧಿಸಿದ್ದು, ಮಸ್ತಾನ್ ಬಂಧನಕ್ಕಾಗಿ ತೀವ್ರ ಶೋಧ ಕಾರ್ಯ ಮುಂದುವರಿದಿದೆ ಎಂದು ಮಾಹಿತಿ ನೀಡಿದರು.

ಘಟನೆಗೆ ಸಂಬಂಧಿಸಿದಂತೆ ಜೈಲು ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದ್ದು, ಭದ್ರತಾ ಲೋಪಗಳ ಕುರಿತು ಸಮಗ್ರ ಪರಿಶೀಲನೆ ನಡೆಸಲಾಗಿದೆ ಎಂದು ತಿಳಿಸಿದರು.

ಜೈಲಿನ ಭದ್ರತೆಯನ್ನು ಮತ್ತಷ್ಟು ಬಲಪಡಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದು, ಈ ಸಂಬಂಧ ಸರ್ಕಾರಕ್ಕೆ ಸಮಗ್ರ ವರದಿ ಸಲ್ಲಿಸಲಾಗುವುದು ಎಂದು ಹೇಳಿದರು.

ಜೈಲಿನ ತಂತಿ ಬೇಲಿಯನ್ನು ಸುಸ್ಥಿತಿಯಲ್ಲಿಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಜೈಲು ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆ ಇರುವುದನ್ನು ಒಪ್ಪಿಕೊಂಡ ಅವರು, ಶೀಘ್ರದಲ್ಲೇ ಅಗತ್ಯ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಇನ್ನು ಮುಂದೆ ಕೈದಿಗಳು ಪರಾರಿಯಾಗದಂತೆ ಹಾಗೂ ಜೈಲಿನೊಳಗಿನ ಅಕ್ರಮ ಚಟುವಟಿಕೆಗಳಿಗೆ ಸಂಪೂರ್ಣ ಕಡಿವಾಣ ಹಾಕುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಡಿಜಿಪಿ ಅಲೋಕ್ ಕುಮಾರ್ ಹೇಳಿದರು.

Share with Friends
author avatar
News Desk