
ಆ.13ರಿಂದ 27ರವರೆಗೆ ವಿಧಾನಮಂಡಲ ಮಳೆಗಾಲದ ಅಧಿವೇಶನ
ಬೆಂಗಳೂರು: ರಾಜ್ಯ ವಿಧಾನಮಂಡಲದ ಮಳೆಗಾಲದ ಅಧಿವೇಶನವು ಆಗಸ್ಟ್ 13ರಿಂದ ಆರಂಭವಾಗಿ ಆಗಸ್ಟ್ 27ರವರೆಗೆ ನಡೆಯಲಿದೆ. ಈ ಕುರಿತು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಧಿಕೃತ ಅಧಿಸೂಚನೆ ಹೊರಡಿಸಿ ಒಪ್ಪಿಗೆ ನೀಡಿದ್ದಾರೆ. ಒಟ್ಟು 10 ದಿನಗಳ ಕಾಲ ಉಭಯ ಸದನಗಳ ಕಲಾಪ ನಡೆಯಲಿದೆ.
ಜುಲೈನಲ್ಲಿ ನಡೆಯಬೇಕಿದ್ದ ಮಳೆಗಾಲದ ಅಧಿವೇಶನವನ್ನು ಎಸ್ಐಆರ್ (SIR) ಪ್ರಕ್ರಿಯೆಯ ಹಿನ್ನೆಲೆ ಆಗಸ್ಟ್ ಎರಡನೇ ವಾರಕ್ಕೆ ಮುಂದೂಡಲಾಗಿದೆ. ಈ ಅಧಿವೇಶನದಲ್ಲಿ ಸರ್ಕಾರ ಹಾಗೂ ವಿಪಕ್ಷಗಳ ನಡುವೆ ಹಲವು ಮಹತ್ವದ ವಿಷಯಗಳ ಕುರಿತು ತೀವ್ರ ಚರ್ಚೆ ನಡೆಯುವ ನಿರೀಕ್ಷೆಯಿದೆ.
ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಹೊಸ ಸರ್ಕಾರಕ್ಕೆ ಇದು ಮೊದಲ ವಿಧಾನಮಂಡಲ ಅಧಿವೇಶನವಾಗಿದ್ದು, ರಾಜಕೀಯವಾಗಿ ಸಾಕಷ್ಟು ಮಹತ್ವ ಪಡೆದಿದೆ. ಸರ್ಕಾರದ ಕಾರ್ಯವೈಖರಿಯನ್ನು ಪರೀಕ್ಷಿಸಲು ವಿಪಕ್ಷಗಳು ಹಲವು ಅಸ್ತ್ರಗಳನ್ನು ಸಿದ್ಧಪಡಿಸಿಕೊಂಡಿವೆ.
ಬಿಡದಿ ಟೌನ್ಶಿಪ್ ಯೋಜನೆ, ಬರ ನಿರ್ವಹಣೆ, ಕೆಪಿಎಸ್ಸಿ ಪಶುವೈದ್ಯಾಧಿಕಾರಿ ನೇಮಕದಲ್ಲಿ ಲಂಚದ ಆರೋಪ ಸೇರಿದಂತೆ ವಿವಿಧ ವಿಚಾರಗಳನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ಸದನದಲ್ಲಿ ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷಗಳು ಸಜ್ಜಾಗಿವೆ.
ಇತ್ತ ಸರ್ಕಾರವೂ ವಿಪಕ್ಷಗಳ ಆರೋಪಗಳಿಗೆ ತಿರುಗೇಟು ನೀಡಲು ಸಿದ್ಧತೆ ನಡೆಸಿದೆ. ಅಧಿವೇಶನ ಆರಂಭಕ್ಕೂ ಮುನ್ನ ಸಂಪೂರ್ಣ ಸಚಿವ ಸಂಪುಟ ರಚನೆ ಪೂರ್ಣಗೊಳ್ಳುವ ಸಾಧ್ಯತೆ ಇದ್ದು, ಸದನದಲ್ಲಿ ವಿಪಕ್ಷಗಳ ಪ್ರಶ್ನೆಗಳಿಗೆ ಸಮರ್ಥ ಉತ್ತರ ನೀಡಲು ಸರ್ಕಾರ ತಯಾರಿ ನಡೆಸಿದೆ.
