
ವಿಜಯಪುರದಲ್ಲಿ ಬರ ಪರಿಸ್ಥಿತಿ ವೀಕ್ಷಿಸಿದ ಸಚಿವ ಎಂ.ಬಿ. ಪಾಟೀಲ್
ವಿಜಯಪುರ: ಜಿಲ್ಲೆಯಲ್ಲಿ ಮಳೆ ಕೊರತೆಯಿಂದಾಗಿ ಉಂಟಾಗಿರುವ ಬರ ಪರಿಸ್ಥಿತಿಯನ್ನು ವಿಜಯಪುರ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ವೀಕ್ಷಿಸಿದರು. ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ರೈತರ ಸಮಸ್ಯೆಗಳನ್ನು ಆಲಿಸಿದ ಸಚಿವರು, ರೈತರಿಗೆ ಅತೀ ಹೆಚ್ಚಿನ ಬರ ಪರಿಹಾರ ದೊರಕಿಸಿಕೊಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ತೊಗರಿ, ಹತ್ತಿ, ಸೂರ್ಯಕಾಂತಿ, ಕಬ್ಬು ಸೇರಿದಂತೆ ಪ್ರಮುಖ ಬೆಳೆಗಳ ಇಳುವರಿ ಕುಸಿಯುವ ಆತಂಕ ರೈತರಲ್ಲಿ ಮೂಡಿದೆ. ತೇವಾಂಶದ ಕೊರತೆಯಿಂದ ಬೆಳೆಗಳಿಗೆ ಹಾನಿಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಪ್ರತಿ ರೈತರ ಜಮೀನಿಗೂ ಭೇಟಿ ನೀಡಿ, ಭಾವಚಿತ್ರ ಸಹಿತ ವೈಜ್ಞಾನಿಕ ಹಾಗೂ ನಿಖರ ಬೆಳೆ ಹಾನಿ ವರದಿ ಸಿದ್ಧಪಡಿಸಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
ವಾಸ್ತವಾಂಶವನ್ನು ಒಳಗೊಂಡ ಬೆಳೆ ಹಾನಿ ವರದಿಯನ್ನು ಸಿದ್ಧಪಡಿಸಿ ಮುಖ್ಯಮಂತ್ರಿಗಳ ಗಮನಕ್ಕೆ ತಂದು, ಸಂಕಷ್ಟದಲ್ಲಿರುವ ರೈತರಿಗೆ ಸೂಕ್ತ ನೆರವು ಒದಗಿಸಬೇಕಾಗಿದೆ ಎಂದು ಎಂ.ಬಿ. ಪಾಟೀಲ್ ತಿಳಿಸಿದರು.
ಇದೇ ವೇಳೆ ಜಿಲ್ಲೆಯಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳ ಮೇವಿನ ಲಭ್ಯತೆ ಕುರಿತು ಮಾಹಿತಿ ನೀಡಿದ ಸಚಿವರು, ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳಲ್ಲಿ ಶೇ.94ಕ್ಕಿಂತ ಹೆಚ್ಚು ನೀರು ಸಂಗ್ರಹವಿದೆ. ಹೀಗಾಗಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿದರು. ಜಾನುವಾರುಗಳಿಗೆ 28 ವಾರಗಳಿಗಾಗುವಷ್ಟು ಮೇವು ದಾಸ್ತಾನು ಇರುವುದಾಗಿ ತಿಳಿಸಿದರು.
ಇನ್ನು, 2025-26ನೇ ಸಾಲಿನ ಪ್ರವಾಹ ಹಾನಿಗೆ ವಿಜಯಪುರ ಜಿಲ್ಲೆಯ 3 ಲಕ್ಷಕ್ಕೂ ಹೆಚ್ಚು ರೈತರಿಗೆ ₹571.44 ಕೋಟಿ ಪರಿಹಾರವನ್ನು ನೇರವಾಗಿ ರೈತರ ಖಾತೆಗಳಿಗೆ ವಿತರಿಸಲಾಗಿದೆ. ಇಷ್ಟು ದೊಡ್ಡ ಮೊತ್ತದ ಪರಿಹಾರ ನೀಡಿದ ರಾಜ್ಯದ ಮೊದಲ ಜಿಲ್ಲೆ ಎಂಬ ಹೆಗ್ಗಳಿಕೆಗೆ ವಿಜಯಪುರ ಪಾತ್ರವಾಗಿದೆ ಎಂದು ಸಚಿವರು ಹೇಳಿದರು.
ಬರದ ಸಂಕಷ್ಟದ ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ರೈತರ ಬೆನ್ನೆಲುಬಾಗಿ ನಿಲ್ಲಲಿದೆ. ರೈತರಿಗೆ ಅಗತ್ಯವಿರುವ ಎಲ್ಲ ರೀತಿಯ ನೆರವು ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಎಂ.ಬಿ. ಪಾಟೀಲ್ ಭರವಸೆ ನೀಡಿದರು.
