
ಕೋಲಾರದಲ್ಲಿ ರಸ್ತೆ ಅಪಘಾತ, ಪೇಪರ್ ಆಯುತ್ತಿದ್ದ ವ್ಯಕ್ತಿ ಸಾವು
ಕೋಲಾರ: ಕೋಲಾರ ತಾಲೂಕಿನ ಮುದುವಾಡಿ ರಸ್ತೆಯಲ್ಲಿ ಶನಿವಾರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಈಚರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಟೊಮೆಟೊ ಸಾಗಿಸುತ್ತಿದ್ದ ಈಚರ್ ವಾಹನ ರಸ್ತೆ ಬದಿಯಲ್ಲಿ ಪೇಪರ್ ಹಾಗೂ ಖಾಲಿ ಬಾಟಲಿಗಳನ್ನು ಸಂಗ್ರಹಿಸುತ್ತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಪಘಾತದಲ್ಲಿ ಈಚರ್ ವಾಹನದ ಚಾಲಕ ಹಾಗೂ ಕ್ಲೀನರ್ ಸೇರಿದಂತೆ ಮೂವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕೋಲಾರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿಸಿದ್ದಾರೆ.
