Latestರಾಷ್ಟ್ರೀಯ-National

ರಾಂಚಿಯಲ್ಲಿ ಆರ್‌ಎಸ್‌ಎಸ್ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ

ರಾಂಚಿ, ಜೂ.17: ಜಾರ್ಖಂಡ್‌ನ ರಾಂಚಿಯಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಕಚೇರಿ ಆವರಣದ ಮೇಲೆ ಶಂಕಿತ ಪೆಟ್ರೋಲ್ ಬಾಂಬ್‌ಗಳನ್ನು ಎಸೆದಿರುವ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.

ಚುಟಿಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಆರ್‌ಎಸ್‌ಎಸ್ ಕಚೇರಿಯ ಬಳಿ ಮಧ್ಯರಾತ್ರಿ ಸುಮಾರು 12:38ಕ್ಕೆ ಇಬ್ಬರು ದುಷ್ಕರ್ಮಿಗಳು ಎರಡು ಬಾಟಲಿಗಳನ್ನು ಎಸೆದು ಪರಾರಿಯಾಗಿದ್ದಾರೆ. ಈ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಆರೋಪಿಗಳಲ್ಲಿ ಒಬ್ಬ ಮುಖವನ್ನು ಬಟ್ಟೆಯಿಂದ ಮುಚ್ಚಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಪೊಲೀಸರ ಮಾಹಿತಿ ಪ್ರಕಾರ, ಎಸೆಯಲಾದ ಎರಡೂ ಬಾಟಲಿಗಳು ಕಚೇರಿಯ ಗೋಡೆಯ ಸಮೀಪ ಬಿದ್ದಿದ್ದು, ಘಟನೆಯಲ್ಲಿ ಕಚೇರಿಗೆ ಯಾವುದೇ ಹಾನಿಯಾಗಿಲ್ಲ. ಆದರೂ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಮಾಹಿತಿ ತಿಳಿಯುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಿಸಿಟಿವಿ ದೃಶ್ಯಗಳ ಆಧಾರದಲ್ಲಿ ಆರೋಪಿಗಳ ಪತ್ತೆಗೆ ಮುಂದಾಗಿದ್ದು, ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಘಟನೆಯ ಬಳಿಕ ಬಿಜೆಪಿ ನಾಯಕ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಬಾಬುಲಾಲ್ ಮರಾಂಡಿ ಸೇರಿದಂತೆ ಹಲವು ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಆರ್‌ಎಸ್‌ಎಸ್ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share with Friends
author avatar
News Desk