
ಕುಂದಾಪುರದಲ್ಲಿ ಗುಂಡಿಟ್ಟು ಉದ್ಯಮಿಯ ಹತ್ಯೆ
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಶುಕ್ರವಾರ ನಸುಕಿನ ವೇಳೆ ನಡೆದ ಶೂಟೌಟ್ ಪ್ರಕರಣದಲ್ಲಿ ಉದ್ಯಮಿ ಐವನ್ ರಿಚರ್ಡ್ ಮಸ್ಕರೇನಸ್ (45) ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಈ ಘಟನೆ ಕುಂದಾಪುರದ ಚರ್ಚ್ ರಸ್ತೆಯ ಹೋಲಿ ರೋಸರಿ ಚರ್ಚ್ ಎದುರು ಬೆಳಗಿನ ಜಾವ ಸುಮಾರು 3.15ರಿಂದ 3.30ರ ನಡುವೆ ನಡೆದಿದೆ.
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಹಣಕಾಸು ಹಾಗೂ ಇತರ ವ್ಯವಹಾರಗಳಿಗೆ ಸಂಬಂಧಿಸಿದ ಮನಸ್ತಾಪವೇ ಹತ್ಯೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಡೆರಿಕ್ ಕ್ರಾಸ್ತಾ ಕೃತ್ಯ ಎಸಗಿ ಥಾರ್ ವಾಹನದಲ್ಲಿ ಪರಾರಿಯಾಗಿದ್ದಾನೆ.
‘ದಮ್ ಇದ್ದರೆ ಕುಂದಾಪುರಕ್ಕೆ ಬಾ’ ಎಂದು ಸವಾಲು
ಜುಲೈ 30ರ ರಾತ್ರಿ ಸುಮಾರು 11.45ಕ್ಕೆ ಡೆರಿಕ್ ಕ್ರಾಸ್ತಾ ಐವನ್ ಅವರಿಗೆ ಕರೆ ಮಾಡಿ ಹಣಕಾಸಿನ ವ್ಯವಹಾರದ ಕುರಿತು ಮಾತುಕತೆ ನಡೆಸಿದ್ದಾನೆ. ಈ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದು, “ದಮ್ ಇದ್ದರೆ ಒಬ್ಬನೇ ಕುಂದಾಪುರಕ್ಕೆ ಬಾ” ಎಂದು ಸವಾಲು ಹಾಕಿದ್ದಾನೆ ಎನ್ನಲಾಗಿದೆ. ಬಳಿಕ ನಸುಕಿನ 1.30ರ ಸುಮಾರಿಗೆ ಸ್ಥಳದ ಲೊಕೇಶನ್ ಕಳುಹಿಸಿದ್ದು, ಅದರಂತೆ ಐವನ್ ಕಾರಿನಲ್ಲಿ ಸ್ಥಳಕ್ಕೆ ತೆರಳಿದ್ದರು.
ಕಾರಿನಿಂದ ಇಳಿದ ತಕ್ಷಣ ಗುಂಡಿನ ದಾಳಿ
ನಸುಕಿನ ಸುಮಾರು 3.15ಕ್ಕೆ ಕಪ್ಪು-ಕೆಂಪು ಬಣ್ಣದ ಥಾರ್ ವಾಹನದಲ್ಲಿ ಬಂದ ಡೆರಿಕ್, ಐವನ್ ಅವರ ಕಾರಿನ ಎದುರು ವಾಹನ ನಿಲ್ಲಿಸಿ ಕೆಳಗಿಳಿದಿದ್ದಾನೆ. ಐವನ್ ಕಾರಿನಿಂದ ಇಳಿದ ತಕ್ಷಣ ಪಿಸ್ತೂಲಿನಿಂದ ಸೊಂಟದ ಕೆಳಭಾಗಕ್ಕೆ ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ತೀವ್ರ ರಕ್ತಸ್ರಾವದಿಂದ ಐವನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮಹಿಳೆಯ ಸಮ್ಮುಖದಲ್ಲೇ ಘಟನೆ
ಪೊಲೀಸರ ಮಾಹಿತಿ ಪ್ರಕಾರ, ಐವನ್ ತಮ್ಮೊಂದಿಗೆ ಹಲವು ವರ್ಷಗಳಿಂದ ಇದ್ದ ಮಹಿಳೆಯೊಂದಿಗೆ ಕಾರಿನಲ್ಲಿ ಸ್ಥಳಕ್ಕೆ ಬಂದಿದ್ದರು. ಘಟನೆಯ ವೇಳೆ ಮಹಿಳೆ ಆರೋಪಿಯನ್ನು ಗುರುತಿಸಿದ್ದು, ತನಿಖೆಗೆ ಮಹತ್ವದ ಮಾಹಿತಿ ನೀಡಿರುವುದಾಗಿ ತಿಳಿದುಬಂದಿದೆ.
ಮೂರು ವಿಶೇಷ ತಂಡಗಳ ರಚನೆ
ಪ್ರಕರಣ ದಾಖಲಿಸಿಕೊಂಡಿರುವ ಕುಂದಾಪುರ ಪೊಲೀಸರು ಆರೋಪಿ ಡೆರಿಕ್ ಕ್ರಾಸ್ತಾ ಬಂಧನಕ್ಕಾಗಿ ಮೂರು ವಿಶೇಷ ತಂಡಗಳನ್ನು ರಚಿಸಿದ್ದಾರೆ. ಆರೋಪಿಯನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಉಡುಪಿ ಜಿಲ್ಲಾ ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.
ಹಿರಿಯ ಪೊಲೀಸ್ ಅಧಿಕಾರಿಗಳ ಭೇಟಿ
ಘಟನಾ ಸ್ಥಳಕ್ಕೆ ಉಡುಪಿ ಜಿಲ್ಲಾ ಎಸ್ಪಿ ಹರಿರಾಂ ಶಂಕರ್, ಹೆಚ್ಚುವರಿ ಎಸ್ಪಿ ಸುಧಾಕರ್ ನಾಯಕ್, ಡಿವೈಎಸ್ಪಿ ಎಚ್.ಡಿ. ಕುಲಕರ್ಣಿ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸೋಕೋ (SOCO) ತಂಡವೂ ಸ್ಥಳ ಪರಿಶೀಲನೆ ನಡೆಸಿದ್ದು, ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.
