Uncategorized

ಶ್ರಾವಣ ಮಾಸದ 3ನೇ ಸೋಮವಾರ: ಯಡೂರ ಶ್ರೀ ವೀರಭದ್ರೇಶ್ವರ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ

ಚಿಕ್ಕೋಡಿ: ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿಯಾಗಿರುವ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ 3ನೇ ಸೋಮವಾರದ ಅಂಗವಾಗಿ ಭಕ್ತರ ಸಾಗರವೇ ಹರಿದುಬಂದಿತು.

ಪವಿತ್ರ ಸೋಮವಾರದ ಹಿನ್ನೆಲೆಯಲ್ಲಿ ಮುಂಜಾನೆಯಿಂದಲೇ ಯಡೂರ ಕ್ಷೇತ್ರಕ್ಕೆ ಸಾವಿರಾರು ಭಕ್ತರು ಆಗಮಿಸಿ ಶ್ರೀ ವೀರಭದ್ರೇಶ್ವರ ಹಾಗೂ ಭದ್ರಕಾಳಿ ದೇವಿಯ ದರ್ಶನ ಪಡೆದು ಪುನೀತರಾದರು.

ಶ್ರಾವಣ ಮಾಸದ 3ನೇ ಸೋಮವಾರದಂದು ದೇವಸ್ಥಾನದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ನಸುಕಿನ ಜಾವದಲ್ಲೇ ಶ್ರೀ ವೀರಭದ್ರೇಶ್ವರ ದೇವರಿಗೆ ವಿಶೇಷ ಪೂಜೆ, ಪುನಸ್ಕಾರ ಹಾಗೂ ಮಹಾಮಂಗಳಾರತಿ ನೆರವೇರಿಸಲಾಯಿತು.

ಇದೇ ಸಂದರ್ಭದಲ್ಲಿ ಪಲ್ಲಕ್ಕಿ ಸೇವೆ ಹಾಗೂ ದಿವ್ಯ ಪಲ್ಲಕ್ಕಿ ಉತ್ಸವ ನಡೆಯಿತು. ಉತ್ಸವದಲ್ಲಿ ಸಾವಿರಾರು ಭಕ್ತಾದಿಗಳು ಪಾಲ್ಗೊಂಡು ಭಕ್ತಿ-ಭಾವದಿಂದ ದೇವರ ದರ್ಶನ ಪಡೆದರು.

ಕರ್ನಾಟಕ ಮಾತ್ರವಲ್ಲದೆ ನೆರೆಯ ಮಹಾರಾಷ್ಟ್ರ ಹಾಗೂ ಆಂಧ್ರಪ್ರದೇಶ ಸೇರಿದಂತೆ ದೇಶದ ವಿವಿಧ ಭಾಗಗಳಿಂದ ಭಕ್ತರು ಯಡೂರ ಕ್ಷೇತ್ರಕ್ಕೆ ಆಗಮಿಸಿದ್ದರು. ಭಕ್ತರು ಸರತಿ ಸಾಲಿನಲ್ಲಿ ನಿಂತು ಶ್ರೀ ವೀರಭದ್ರೇಶ್ವರ ದೇವರಿಗೆ ಅಭಿಷೇಕ ನೆರವೇರಿಸಿ ದರ್ಶನ ಪಡೆದರು.

ಶ್ರಾವಣ ಮಾಸದ ಹಿನ್ನೆಲೆಯಲ್ಲಿ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಭಕ್ತರಿಂದ ಕಳೆಕಟ್ಟಿದ ವಾತಾವರಣ ನಿರ್ಮಾಣವಾಗಿತ್ತು.

ಶ್ರೀಶೈಲ ಜಗದ್ಗುರುಗಳ ಮಾರ್ಗದರ್ಶನದಲ್ಲಿ ಯಡೂರ ಕ್ಷೇತ್ರವು ದಿನದಿಂದ ದಿನಕ್ಕೆ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದ್ದು, ಕ್ಷೇತ್ರಕ್ಕೆ ಆಗಮಿಸುವ ಭಕ್ತರಿಗೆ ಅಗತ್ಯ ಮೂಲಸೌಕರ್ಯ ಹಾಗೂ ವಿವಿಧ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ.

Share with Friends
author avatar
Digital Desk