
ಯಾದಗಿರಿಯಲ್ಲಿ ಭೀಕರ ರಸ್ತೆ ಅಪಘಾತ
ಯಾದಗಿರಿ.ಸೆ.29 –ಜಿಲ್ಲೆಯ ಶಹಾಪುರ ತಾಲೂಕಿನ ರಸ್ತಾಪುರ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ೬ ವರ್ಷದ ಬಾಲಕಿ ಸೇರಿದಂತೆ ಮೂವರು ಮೃತಪಟ್ಟು,ಮತ್ತೋರ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸಗರ ಗ್ರಾಮದಿಂದ ರಾಯಚೂರಿಗೆ ತೆರಳುತ್ತಿದ್ದ ಕಾರಿನ ಟೈರ್ ಸ್ಫೋಟಗೊಂಡ ಪರಿಣಾಮ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ.ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಆರಾಧ್ಯ (6), ತೇಜಸ್ವಿನಿ (27) ಹಾಗೂ ಸಹನಾ (22) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಮಲ್ಲಿಕಾರ್ಜುನ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನುಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಚಾಲನೆ ಮಾಡುತ್ತಿದ್ದ ಮಹೇಂದ್ರ ಕುಮಾರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಶಹಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ಸೇರಿದಂತೆ ಹೆಚ್ಚಿನ ಮಾಹಿತಿಯನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
