LatestTop Storiesರಾಜ್ಯ-Karnataka

ದಲಿತರ ಮೇಲಿನ ದೌರ್ಜನ್ಯ ತಡೆಗೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿ:

ಲಿಂಗಸೂಗೂರು: ರಾಜ್ಯದಲ್ಲಿ ದಲಿತರು ಹಾಗೂ ದಲಿತ ಮಹಿಳೆಯರ ಮೇಲಿನ ದೌರ್ಜನ್ಯ, ಕೊಲೆ ಮತ್ತು ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಇಂತಹ ಪ್ರಕರಣಗಳಲ್ಲಿ ಸಂತ್ರಸ್ತ ಕುಟುಂಬಗಳಿಗೆ ಸರ್ಕಾರ ಹಾಗೂ ಅಧಿಕಾರಿಗಳು ತಕ್ಷಣ ಸ್ಪಂದಿಸಿ ನ್ಯಾಯ ಒದಗಿಸಬೇಕು ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಚಲುವಾದಿ ನಾರಾಯಣಸ್ವಾಮಿ ಆಗ್ರಹಿಸಿದರು.

ತಾಲೂಕಿನ ಕರಡಕಲ್ ಗ್ರಾಮದ ರಾಣಿಮ್ಮ ಅವರ ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ ಬಳಿಕ ಲಿಂಗಸೂಗೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಸಂತ್ರಸ್ತ ಕುಟುಂಬಗಳಿಗೆ ತಕ್ಷಣ ಪರಿಹಾರ ಹಾಗೂ ಅಗತ್ಯ ನೆರವು ನೀಡಬೇಕು ಎಂದು ಒತ್ತಾಯಿಸಿದರು.

ದಲಿತರ ಮೇಲಿನ ದೌರ್ಜನ್ಯ ತಡೆಗೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಇತ್ತೀಚೆಗೆ ನಡೆದಿರುವ ಕೊಲೆ ಹಾಗೂ ಆತ್ಮಹತ್ಯೆ ಪ್ರಕರಣಗಳು ಜನರಲ್ಲಿ ಆತಂಕ ಮೂಡಿಸಿವೆ. ಇಂತಹ ಗಂಭೀರ ವಿಚಾರಗಳನ್ನು ವಿಧಾನಸಭೆಯಲ್ಲಿ ಸಮಗ್ರವಾಗಿ ಚರ್ಚಿಸಿ, ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕಿತ್ತು. ಆದರೆ ಸದನದ ಕಲಾಪವನ್ನು ಮುಂಚಿತವಾಗಿ ಮೊಟಕುಗೊಳಿಸಿರುವುದು ಸರಿಯಲ್ಲ ಎಂದು ಅವರು ಸರ್ಕಾರವನ್ನು ಟೀಕಿಸಿದರು.

ದೌರ್ಜನ್ಯದಿಂದ ಸಂಕಷ್ಟಕ್ಕೊಳಗಾದ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡುವುದರ ಜೊತೆಗೆ, ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ಹಾಗೂ ಎರಡು ಎಕರೆ ಜಮೀನು ಒದಗಿಸಿ ಪುನರ್ವಸತಿ ಕಲ್ಪಿಸಬೇಕು ಎಂದು ಚಲುವಾದಿ ನಾರಾಯಣಸ್ವಾಮಿ ಒತ್ತಾಯಿಸಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ದಲಿತರ ರಕ್ಷಣೆ ಹಾಗೂ ಅವರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ವ್ಯವಸ್ಥೆ ರೂಪಿಸಬೇಕು. ಕಾನೂನು ಸುವ್ಯವಸ್ಥೆ ಕಾಪಾಡಲು ಸಮರ್ಥರನ್ನು ಗೃಹ ಸಚಿವರನ್ನಾಗಿ ನೇಮಿಸಬೇಕು ಎಂದು ಅವರು ಆಗ್ರಹಿಸಿದರು.

ದಲಿತ ಸಮುದಾಯದ ಸುರಕ್ಷತೆ ಮತ್ತು ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಸರ್ಕಾರ ಯಾವುದೇ ವಿಳಂಬ ಮಾಡದೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

Share with Friends
author avatar
Digital Desk