
ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಹಗರಣವನ್ನು CBI ಗೆ ವಹಿಸಿ ಎಂದು ಫ್ರೀಡಂ ಪಾರ್ಕ್ನಲ್ಲಿ ಅಭ್ಯರ್ಥಿಗಳ ಪ್ರತಿಭಟನೆ..!
ಬೆಂಗಳೂರು: ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಹಗರಣವನ್ನು ಖಂಡಿಸಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಅಭ್ಯರ್ಥಿಗಳು ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಹಗರಣವನ್ನ ಕೂಡಲೇ CBI ಗೆ ವಹಿಸುವಂತೆ ಒತ್ತಾಯಿಸಿ ಅಭ್ಯರ್ಥಿಗಳು ಘೋಷಣೆ ಕೂಗಿದರು. “CBI ಗೆ ವಹಿಸಿದರೆ ಮಾತ್ರ ಅನ್ಯಾಯವಾದವರಿಗೆ ನ್ಯಾಯ ಸಿಗುತ್ತೆ” ಎಂದು ಪ್ರತಿಭಟನಾಕಾರರು ಹೇಳಿದರು.SIT ತನಿಖೆಯಿಂದ ನಮಗೆ ನ್ಯಾಯ ಸಿಗೋದು ಡೌಟ್ ಎಂದು ಅಭ್ಯರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. ಈ ಹಿಂದೆ ನಡೆದ ಹಲವು ನೇಮಕಾತಿ ಹಗರಣಗಳಲ್ಲಿ SIT ತನಿಖೆ ಸರಿಯಾಗಿ ಆಗಿಲ್ಲ ಎಂದು ಆರೋಪಿಸಿದರು.
“ಕೆಪಿಎಸ್ಸಿ ಗೆ ಧಿಕ್ಕಾರ” ಎಂದು ಕೂಗುತ್ತಾ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದರು. ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ, ಅಕ್ರಮ ಹಣ ವರ್ಗಾವಣೆ ಮತ್ತು ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ಆರೋಪಗಳನ್ನು ಅವರು ಮಾಡಿದರು.ಪ್ರತಿಭಟನೆಗೆ ರಾಜ್ಯದ ಹಲವು ಜಿಲ್ಲೆಗಳಿಂದ ಬಂದಿರುವ ಅಭ್ಯರ್ಥಿಗಳು ಭಾಗಿಯಾಗಿದ್ದರು. ಕೈಯಲ್ಲಿ ಪ್ಲೆಕಾರ್ಡ್ ಹಿಡಿದು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಅಭ್ಯರ್ಥಿಗಳ ಆಗ್ರಹ
- ಪಶುವೈದ್ಯಾಧಿಕಾರಿ ನೇಮಕಾತಿ ಪ್ರಕ್ರಿಯೆಯನ್ನು ತಕ್ಷಣ ರದ್ದುಗೊಳಿಸಬೇಕು
- ಇಡೀ ಪ್ರಕ್ರಿಯೆಯನ್ನು CBI ಗೆ ವಹಿಸಿ ನಿಷ್ಪಕ್ಷಪಾತ ತನಿಖೆ ನಡೆಸಬೇಕು
- ಹಗರಣದಲ್ಲಿ ಭಾಗಿಯಾದ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು
- ಮತ್ತೆ ಪಾರದರ್ಶಕವಾಗಿ ಹೊಸ ನೇಮಕಾತಿ ನಡೆಸಬೇಕು
ಅಭ್ಯರ್ಥಿಗಳು ತಮ್ಮ ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರಿಸುವುದಾಗಿ ಎಚ್ಚರಿಕೆ ನೀಡಿದರು.ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರತಿಭಟನಾಕಾರರನ್ನು ನಿಯಂತ್ರಿಸಿದರು. ಸರ್ಕಾರ ಈ ಕುರಿತು ತಕ್ಷಣ ಕ್ರಮ ಕೈಗೊಳ್ಳುವಂತೆ ಅಭ್ಯರ್ಥಿಗಳು ಮನವಿ ಮಾಡಿದ್ದಾರೆ.
